ಬೆಂಗಳೂರು: ಎನ್‌ಡಿಎ ವತಿಯಿಂದ ರಾಜ್ಯಸಭಾ ಚುನಾವಣೆಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ನೀಡದಿರುವ ವಿಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, “ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಬೆಂಬಲ ನೀಡಿ ಎನ್‌ಡಿಎ ಬಲವರ್ಧನೆಗಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಬಗ್ಗೆ ನಮಗೆ ಅಪಾರ ಗೌರವವಿದೆ.

ಆದರೆ ಅವರಿಗೆ ರಾಜ್ಯಸಭೆ ಟಿಕೆಟ್ ನೀಡುವ ಕುರಿತು ರಾಜ್ಯ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿರಲಿಲ್ಲ” ಎಂದು ಹೇಳಿದರು.ಮಾಜಿ ಸಂಸದೆ ಸುಮಲತಾ ಅವರ ಹೆಸರನ್ನೂ ಪಕ್ಷದ ಮಟ್ಟದಲ್ಲಿ ಪ್ರಸ್ತಾಪಿಸಲಾಗಿತ್ತು ಎಂದು ತಿಳಿಸಿದ ವಿಜಯೇಂದ್ರ, “ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ಪರಿಗಣಿಸಿ ಯಾರಿಗೆ ಅವಕಾಶ ನೀಡಬೇಕು ಎಂಬುದನ್ನು ಪಕ್ಷದ ವರಿಷ್ಠರು ನಿರ್ಧರಿಸಿದ್ದಾರೆ. ಈ ಬಾರಿ ಬಿಜೆಪಿ ಪ್ರಾಮಾಣಿಕವಾಗಿ ದುಡಿದ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಿದೆ” ಎಂದರು.

ಸುಮಲತಾ ಅವರ ಬಗ್ಗೆ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕತ್ವದಲ್ಲಿ ಅಪಾರ ಗೌರವವಿದೆ ಎಂದು ಹೇಳಿದ ಅವರು, “ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸುಮಲತಾ ಅವರಿಗೆ ಬೆಂಬಲ ನೀಡಿತ್ತು. ಆ ಬೆಂಬಲದಿಂದಲೇ ಅವರು ಉತ್ತಮ ಅಂತರದಿಂದ ಗೆಲುವು ಸಾಧಿಸಿದ್ದರು. ಬಳಿಕ ಬಿಜೆಪಿ-ಜೆಡಿಎಸ್ ಮೈತ್ರಿಯ ಹಿನ್ನೆಲೆಯಲ್ಲಿ ಸುಮಲತಾ ಮಂಡ್ಯ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಟ್ಟಿದ್ದರು” ಎಂದು ನೆನಪಿಸಿದರು.”ರಾಜಕೀಯವಾಗಿ ಇದು ಅಂತಿಮ ಹಂತವಲ್ಲ. ಮುಂದಿನ ದಿನಗಳಲ್ಲಿ ಪಕ್ಷದ ವರಿಷ್ಠರು ಸುಮಲತಾ ಅವರಿಗೆ ಸೂಕ್ತ ಸ್ಥಾನಮಾನ ನೀಡಲಿದ್ದಾರೆ ಎಂಬ ವಿಶ್ವಾಸವಿದೆ” ಎಂದು ವಿಜಯೇಂದ್ರ ಹೇಳಿದರು.






