ಬೆಂಗಳೂರು: ಅನ್ನಭಾಗ್ಯ ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧಇಂದು ಬಿಜೆಪಿ ಪ್ರತಿಭಟನೆ ನಡೆಸಿದೆ. ಪ್ರತಿಭಟನೆ ವೇಳೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಬಳಿಕ ಬಿಡುಗಡೆಗೊಳಿಸಿದರು.
ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಮಾಜಿ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. 50ಕ್ಕೂ ಹೆಚ್ಚಿನ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ ಮಳೆಯ ನಡುವೆಯೇ ರಾಜ್ಯ ಸರ್ಕಾರದ ವಿರುದ್ಧ ಭಿತ್ತಿ ಪತ್ರ ಪ್ರದರ್ಶನ ಮಾಡಿ ಘೋಷಣೆ ಕೂಗಿದರು. ಈ ವೇಳೆ ಪ್ರತಿಭಟನಾನಿರತರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಕ್ಕೆ ಆಕ್ರೋಶಗೊಂಡ ಅಶೋಕ್, ಪೊಲೀಸರು ದೌರ್ಜನ್ಯ ಮಾಡುತ್ತಿದ್ದಾರೆ, ಇವರದ್ದು ಗೂಂಡಾ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಪೊಲೀಸರ ನಡೆಗೆ ಗರಂ ಆದ ಬೊಮ್ಮಾಯಿ, ಕಾಂಗ್ರೆಸ್‌ನವರಿಗೆ ಪ್ರತಿಭಟನೆಗೆ ಅವಕಾಶ ಕೊಟ್ಟಿದ್ದಾರೆ. ಆದರೆ ನಮಗೆ ಅವಕಾಶ ಕೊಟ್ಟಿಲ್ಲ. ನಿಮ್ಮ ಪೊಲೀಸ್ ರಾಜ್ಯಕ್ಕೆ ನಾವು ಹೆದರಲ್ಲ. ನಿಮ್ಮ ಲಾಠಿಯಲ್ಲಿ ಶಕ್ತಿ ಇದೆಯೋ? ರಟ್ಟೆಯಲ್ಲಿ ಶಕ್ತಿ ಇದೆಯೋ ನೋಡೋಣ ಎಂದು ಠಾಣೆ ಆವರಣದಲ್ಲೇ ಕೂತು ರಾಜ್ಯ ಸರ್ಕಾರಕ್ಕೆ ಬೊಮ್ಮಾಯಿ ಸವಾಲ್ ಹಾಕಿದರು.
ಪೊಲೀಸ್ ಬಲ ಪ್ರಯೋಗಿಸಿ ನಮ್ಮ ಪ್ರತಿಭಟನೆಗೆ ಕಾಂಗ್ರೆಸ್ ಅಡ್ಡಿ ಪಡಿಸಿದೆ. ಮಾತು ತಪ್ಪಿದ ಕಾಂಗ್ರೆಸ್ ಜನರಿಗೆ ಮೋಸ ಮಾಡುತ್ತಿದೆ. ಹತ್ತು ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿ, ಈಗ 5 ಕೆ.ಜಿಗೆ ಬಂದಿದ್ದಾರೆ. ಅಕ್ಕಿ ಕೊಡುವುದನ್ನು ಮುಂದೂಡಲು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಅಧಿಕಾರ ಕೊಟ್ಟ ಮೇಲೂ ಬೀದಿಗೆ ಬಂದಿದ್ದಾರೆ ಅಂದರೆ ಯೋಗ್ಯತೆ ಇಲ್ಲದವರು ಎಂದರ್ಥ ಮಾಜಿ ಸಚಿವ ಆರ್.ಅಶೋಕ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.