ಹಿಜಾಬ್ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ವಾಕ್ಸಮರ ಮುಂದುವರೆದಿದ್ದು, ಬಿಜೆಪಿ ರಾಜ್ಯ ಘಟಕ ಟ್ವೀಟ್ ಬೆನ್ನಲ್ಲೇ ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ಮತ್ತು ಸಂಘ ಪರಿವಾರದ ವಿರುದ್ಧ ಹರಿಹಾಯ್ದಿದ್ದಾರೆ.
ಈ ಕುರಿತು ಅವರು ಇಂದು ಟ್ವೀಟ್ ಮಾಡಿ, ಹಿಜಾಬ್ ಹೆಸರಿನಲ್ಲಿ ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತಮಾಡುವುದೇ ಸಂಘ ಪರಿವಾರದ ಪ್ರಮುಖ ಅಜೆಂಡಾ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಇಂದು ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯದಾದ್ಯಂತ ಕೋಮು ಸಂಘರ್ಷ ಸೃಷ್ಟಿಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್ ಹಿಜಾಬ್ ವಿಚಾರದಲ್ಲಿ ಪ್ರಯತ್ನಿಸುದೆ. ಈ ಕೂಡಲೇ ಹಿಜಾಬ್ ವಿವಾದಕ್ಕೆ ಕಡಿವಾಣ ಹಾಕಿ ದ್ವೇಷ ಹರಡುತ್ತಿರುವ ವ್ಯಕ್ತಿಗಳನ್ನು ಬಂಧಿಸಬೇಕು ಎಂದು ಸಿಎಂ ಬೊಮ್ಮಾಯಿ ಅವರಿಗೆ ಒತ್ತಾಯಿಸುತ್ತೇನೆ ಎಂದಿದ್ದಾರೆ.
ಪ್ರಧಾನಿ ಮೋದಿ ಅತ್ತ ಬೇಟಿ ಬಚಾವೋ, ಬೇಟಿ ಪಡಾವೋ ಬಗ್ಗೆ ಮಾತನಾಡುತ್ತಾರೆ. ಕರ್ನಾಟಕದಲ್ಲಿ ಹೆಣ್ಣು ಮಕ್ಕಳಿಗೆ ಅನ್ಯಾಯವಾಗುತ್ತಿದೆ. ಈ ಬಗ್ಗೆ ಅವರಿಗೆ ಗೊತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಸಂವಿಧಾನದಡಿ ಯಾವುದೇ ಧರ್ಮವನ್ನು ಆಚರಿಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ತಮ್ಮ ತಮ್ಮ ಧರ್ಮದ ಅನುಸಾರ ಜನರು ಯಾವುದೇ ಬಟ್ಟೆ ಧರಿಸಬಹುದು. ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರ ತರಗತಿ ನಿರಾಕರಿಸುವುದು ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದಿದ್ದಾರೆ.