ವಲ್ಸಾದ್: ಗುಜರಾತ್’ನ ವಲ್ಸಾದ್ ಜಿಲ್ಲೆಯಲ್ಲಿ ಔಷಧ ಕಂಪನಿಯೊಂದರಲ್ಲಿ ಕಳೆದ ರಾತ್ರಿ ಹಠಾತ್ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಜಿಲ್ಲೆಯ ಸಾರಿಗಾಮ್ ಸಿಐಡಿಸಿ ರಾಸಾಯನಿಕ ವಲಯದಲ್ಲಿರುವ ವ್ಯಾನ್ ಪೆಟ್ರೋಕೆಮ್ ಫಾರ್ಮಾ ಕಂಪನಿಯಲ್ಲಿ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಸಮಯದಲ್ಲಿ ಕಟ್ಟಡದ ಒಂದು ಭಾಗ ಕುಸಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಘಟನೆ ಬಗ್ಗೆ ಮಾಹಿತಿ ಪಡೆದ ನಂತರ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.
ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಘಟನಾ ಸ್ಥಳಕ್ಕೆ ತೆರಳಿದಾಗ ಯಾವುದೇ ಭದ್ರತಾ ಸಿಬ್ಬಂದಿ ಇರಲಿಲ್ಲ. ಯಾವ ರಾಸಾಯನಿಕ ಎಂಬುದು ತಿಳಿಯದೆ ಅಗ್ನಿ ನಿಯಂತ್ರಣ ಕಾರ್ಯಾಚರಣೆಯನ್ನು ಆರಂಭಿಸಲಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ರಾಹುಲ್ ಮುರಾರಿ ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದು, ಇಂದು ಮತ್ತೆ ಆರಂಭಿಸಲಾಗುತ್ತಿದೆ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.