ಬೆಂಗಳೂರಿನ 5 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಈ ಸಂಬಂಧ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಯಾರೂ ಆತಂಕ ಪಡುವ ಅಗತ್ಯವಿಲ್ಲ. ಈಗಾಗಲೇ ಎಲ್ಲಾ ರೀತಿಯ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನ ಶಾಲೆಗಳ ಬಾಂಬ್ ಬೆದರಿಕೆ ಬಗ್ಗೆ ಆತಂಕಪಡಬೇಕಾಗಿಲ್ಲ. ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಲ್ಲಿಂದ ಕರೆ ಬಂದಿದೆ ಎಂಬ ಬಗ್ಗೆ ತನಿಖೆ ನಡೆಯುತ್ತಿದ್ದು, ಪೋಷಕರು ಆತಂಕಪಡಬೇಕಾಗಿಲ್ಲ. ರಾಜ್ಯಕ್ಕೆ ಕೆಟ್ಟ ಹೆಸರು ತರಬೇಕು ಎಂಬ ಕಾರಣಕ್ಕೆ ಈ ರೀತಿ ಮಾಡುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯೊ ಹೇಳಿದ್ದಾರೆ.
ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತಗೆದುಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದಾರೆ. ಈಗಾಗಲೇ ನಾವು ಪೊಲೀಸರಿಗೆ ಕಾಲ್ ಡಿಟೈಲ್ಸ್ ಚೆಕ್ ಮಾಡಲು ಹೇಳಿದ್ದು, ಆದಷ್ಟೂ ಬೇಗ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಂತೆ ಸೂಚಿಸಿದ್ದೇವೆ. ಕರ್ನಾಟಕ ಪ್ರಗತಿ ಹೊಂದುತ್ತಿರುವ ರಾಜ್ಯ. ಅದಕ್ಕಾಗಿ ಇಲ್ಲಿ ಶಾಂತಿ ಕದಡಲು ಕೆಲವರಿಂದ ಹುನ್ನಾರ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಬೊಮ್ಮಾಯಿ ಅವರಿಗೆ ಗುಪ್ತಚರ ಇಲಾಖೆ ಎಡಿಜಿಪಿ ದಯಾನಂದ್ ಸಮಗ್ರ ಮಾಹಿತಿ ನೀಡಿದ್ದಾರೆ.