ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆಕ್ಜೆ ಮಾಜಿ ಸಚಿವ ಆರ್. ಅಶೋಕ್ ಅವರನ್ನು ಆಯ್ಕೆ ಮಾಡಿದ್ದು, ಅಸಮಾಧಾನದ ನಡುವೆಯೂ ಅಶೋಕ್ ಅವರಿಗೆ ವಿರೋಧ ಪಕ್ಷದ ನಾಯಕನ ಸ್ಥಾನ ನೀಡಿದಂತಾಗಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯ ನಂತರ ಆರ್.ಅಶೋಕ್ ಹೆಸರು ಘೋಷಣೆ ಮಾಡಲಾಗಿದೆ. ಅಶೋಕ್ ಹೆಸರಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೂಚನೆ ಕೊಟ್ಟರೆ, ಶಾಸಕ ಸುನಿಲ್ ಕುಮಾರ್ ಅನುಮೋದನೆ ನೀಡಿದರು.
ವಿಪಕ್ಷ ನಾಯಕನ ಸ್ಥಾನಕ್ಕೆ ಆರ್ ಅಶೋಕ್ ಸೇರಿ ಮಲ್ಲೇಶ್ವರಂ ಕ್ಷೇತ್ರದ ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ, ಕಾರ್ಕಳದ ವಿ.ಸುನೀಲ್‍ಕುಮಾರ್, ತೀರ್ಥಹಳ್ಳಿಯ ಅರಗ ಜ್ಞಾನೇಂದ್ರ, ವಿಜಾಪುರದ ಬಸನಗೌಡ ಪಾಟೀಲ್ ಯತ್ನಾಳ್ ಹೆಸರುಗಳು ಕೂಡ ಪ್ರಸ್ತಾಪವಾಗಿತ್ತು. ರಾಜ್ಯ ಬಿಜೆಪಿಗೆ ನೂತನ ಸಾರಥಿಯಾಗಿ ಬಿ.ವೈ ವಿಜಯೇಂದ್ರ ಅಧಿಕಾರ ಸ್ವೀಕರಿಸಿದ ಬಳಿಕ ಇಂದು ಬಹುನಿರೀಕ್ಷಿತ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆದಿದೆ.
ಖಾಸಗಿ ಹೋಟೆಲ್‍ನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಕೇಂದ್ರದಿಂದ ಚುನಾವಣಾವೀಕ್ಷಕರಾಗಿ ಆಗಮಿಸಿದ್ದ ಹಾಲಿ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಹಾಗೂ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್‍ಕುಮಾರ್ ಗೌತಮ್ ಅವರುಗಳು ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಿದ್ದಾರೆ.
ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ವೀರಶೈವ ಲಿಂಗಾಯಿತ ಸಮುದಾಯಕ್ಕೆ ನೀಡಿರುವುದರಿಂದ ಒಕ್ಕಲಿಗ ಸಮುದಾಯಕ್ಕೆ ಪ್ರತಿಪಕ್ಷದ ನಾಯಕನ ಸ್ಥಾನ ಕೊಡಬೇಕೆಂಬ ಕೂಗು ಕೇಳಿಬಂದಿತ್ತು. ಈ ಪ್ರಕಾರ ಶಾಸಕ ಆರ್. ಅಶೋಕ್‍ಗೆ ಹೆಚ್ಚಿನ ಶಾಸಕರು ಬೆಂಬಲವನ್ನು ಸೂಚಿಸಿದ್ದು, ಜೊತೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಬೆಂಬಲವೂ ಸಿಕ್ಕಿದ್ದು, ವಿಪಕ್ಷ ನಾಯಕನಾಗಿ ಆಯ್ಕೆಯಾಗಿದ್ದಾರೆ.

ಡಿಸೆಂಬರ್ 4 ರಿಂದ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೂ ಮುನ್ನ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಿದೆ.