ನವದೆಹಲಿ:
ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಎದೆ ನೋವಿನ ಹಿನ್ನೆಲೆಯಲ್ಲಿ ನವದೆಹಲಿಯ ಗಂಗಾ ರಾಮ್ ಆಸ್ಪತ್ರೆನಲ್ಲಿ ದಾಖಲಿಸಲಾಗಿದೆ. ವೈದ್ಯರ ತಂಡದ ನಿಗಾದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಡಾ. ಅನುಪ್ ಬಸು ಅವರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಆಸ್ಪತ್ರೆ ಮೂಲಗಳ ಪ್ರಕಾರ, ಸೋನಿಯಾ ಗಾಂಧಿಯವರ ಆರೋಗ್ಯ ಸ್ಥಿತಿ ಪ್ರಸ್ತುತ ಸ್ಥಿರವಾಗಿದ್ದು, ಅಗತ್ಯ ವೈದ್ಯಕೀಯ ಪರೀಕ್ಷೆಗಳು ನಡೆಯುತ್ತಿವೆ. ಅವರ ಪುತ್ರಿ ಪ್ರಿಯಾಂಕಾ ಗಾಂಧಿ ಆಸ್ಪತ್ರೆಯಲ್ಲೇ ಇದ್ದು ತಾಯಿಯ ಆರೈಕೆ ಮಾಡುತ್ತಿದ್ದಾರೆ.ಇದಕ್ಕೂ ಮೊದಲು ಜನವರಿಯಲ್ಲಿ ಉಸಿರಾಟದ ತೊಂದರೆಯಿಂದಲೂ ಸೋನಿಯಾ ಗಾಂಧಿ ಇದೇ ಆಸ್ಪತ್ರೆಗೆ ದಾಖಲಾಗಿದ್ದರು. ಆ ವೇಳೆ ವೈದ್ಯರು ಸೂಕ್ತ ಚಿಕಿತ್ಸೆ ನೀಡಿ ಅವರನ್ನು ಬಿಡುಗಡೆ ಮಾಡಿದ್ದರು.
ಪ್ರಸ್ತುತ ಸೋನಿಯಾ ಗಾಂಧಿ ರಾಜಸ್ಥಾನವನ್ನು ಪ್ರತಿನಿಧಿಸುವ ರಾಜ್ಯಸಭಾ ಸದಸ್ಯೆಯಾಗಿದ್ದು, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 1998ರಿಂದ 2017ರವರೆಗೆ ಹಾಗೂ 2019ರಿಂದ 2022ರವರೆಗೆ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿರುವ ಅವರು ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಡಿಮೆ ಪ್ರಮಾಣದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಇತ್ತೀಚಿನ ಅಪ್ಡೇಟ್ ಪ್ರಕಾರ, ವೈದ್ಯರು ಅವರ ಆರೋಗ್ಯವನ್ನು ಹತ್ತಿರದಿಂದ ಗಮನಿಸುತ್ತಿದ್ದು, ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲೇ ಇರಿಸಿ ಚಿಕಿತ್ಸೆ ಮುಂದುವರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ






