ಬೆಂಗಳೂರು :ಏ.16: ಕರ್ನಾಟಕ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಟಿಕೆಟ್ ವಂಚಿತ ಹಿರಿಯ ನಾಯಕರೇ ಬಿಜೆಪಿ ವಿರುದ್ಧ ತೊಡೆ ತಟ್ಟಿತ್ತಿರುವುದು ಬಿಜೆಪಿಗೆ ಭಾರಿ ಮುಳುವಾಗ ಬಹುದು ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ. ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ ಪಡೆಯುವಲ್ಲಿ ವಿಫಲವಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಶಾಸಕ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇದಕ್ಕೂ ಮೊದಲು ಅಥಣಿಯಲ್ಲಿ ಬಿಜೆಪಿ ಟಿಕೆಟ್ ನೀಡಿಲ್ಲ ಎಂದು ಲಕ್ಷ್ಮಣ ಸವದಿ ಬಿಜೆಪಿಗೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ಸೇರಿ ಟಿಕೆಟ್ ಗಿಟ್ಟಿಸಿಕೊಂಡಿದ್ದರು. ಇನ್ನು ಎಲ್ಲಾ ಬೆಳವಣಿಗೆಗಳ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಇಬ್ಬರ ವಿರುದ್ಧ ಅಸಾಮಾಧಾನ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಜನ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರನ್ನು ಕ್ಷಮಿಸುವುದಿಲ್ಲ. ಧರ್ಮೇಂದ್ರ ಪ್ರಧಾನ್ ಅವರು ಜಗದೀಶ್ ಶೆಟ್ಟರ್ ಅವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದ್ದರು. ಶೆಟ್ಟರ್ ಕುಟುಂಬಕ್ಕೆ ಟಿಕೆಟ್ ನೀಡಿದ್ದೆವು. ಆದರೆ ಅವರು ಅದನ್ನು ಲೆಕ್ಕಿಸಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.
ನಾವು ಅವರನ್ನು ಕರ್ನಾಟಕದ ಸಿಎಂ ಮಾಡಿದ್ದೆವು, ಮತ್ತು ನಾವು ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಿದ್ದೆವು. ಆದರೆ ಅವರು ಈಗ ನೀಡಿರುವ ಹೇಳಿಕೆಗಳು ನಮಗೆ ಬೇಸರ ತಂದಿವೆ. ಜನರಿಗೆ ಜಗದೀಶ್ ಶೆಟ್ಟರ್ ಬಗ್ಗೆ ಗೊತ್ತಿದೆ ಎಂದರೆ ಅದು ಬಿಜೆಪಿಯಿಂದಲೇ” ಎಂದು ಹೇಳಿದರು.
ಮತ್ತೆ ಬಿಜೆಪಿಗೆ ಬಂದರೆ ಸ್ವಾಗತಿಸುತ್ತೇವೆ : ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತು ಕೇಳಿಬರುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಎಸ್ವೈ, ”ಜಗದೀಶ್ ಶೆಟ್ಟರ್ ಕಾಂಗ್ರೆಸ್ಗೆ ಏಕೆ ಸೇರುತ್ತಿದ್ದಾರೆ? ಅವರು ಮತ್ತೆ ಬಿಜೆಪಿಗೆ ಬಂದರೆ ಸ್ವಾಗತಿಸುತ್ತೇವೆ” ಎಂದು ತಿಳಿಸಿದರು.
ಬಿಜೆಪಿ ರಾಷ್ಟ್ರೀಯ ಪಕ್ಷ, ನನಗೆ, ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಮತ್ತಿತರರಿಗೆ ಬಿಜೆಪಿ ಉತ್ತಮ ಸ್ಥಾನಮಾನ ನೀಡಿದೆ. ಲಕ್ಷ್ಮಣ ಸವದಿ ಅವರನ್ನು ಸಚಿವರನ್ನಾಗಿಸಿದ್ದೆವು, ಚುನಾವಣೆಯಲ್ಲಿ ಸೋತಾಗಲೂ ಅವರನ್ನು ಎಂಎಲ್‌ಸಿ ಮಾಡಿದೆವು, ಹಲವು ಅವಕಾಶಗಳನ್ನು ಕೊಟ್ಟಿದ್ದೇವೆ. ಪಕ್ಷ, ಲಕ್ಷ್ಮಣ ಸವದಿ ಅನುಯಾಯಿಗಳನ್ನು ನಾನು ಕೇಳಲು ಬಯಸುತ್ತೇನೆ, ನಾವು ಏನು ತಪ್ಪು ಮಾಡಿದೆವು, ಅವರು ಏಕೆ ಕಾಂಗ್ರೆಸ್ ಸೇರಿದರು?” ಎಂದು ಬಿಎಸ್ವೈ ಪ್ರಶ್ನಿಸಿದರು.

ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ : ಶಿರಸಿಯಲ್ಲಿ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಪಾತ್ರ ಸಲ್ಲಿಸಿ ಮಾತನಾಡಿದ ಶೆಟ್ಟರ್, ”ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಮಾತ್ರ ನನಗೆ ಟಿಕೆಟ್ ಬೇಕಿತ್ತು. ರಾಜ್ಯದಲ್ಲಿ ಪಕ್ಷದ ಬೆಳವಣಿಗೆಗೆ ನಾನು ಸಾಕಷ್ಟು ಕೊಡುಗೆ ನೀಡಿದ್ದೇನೆ. ಕಾಂಗ್ರೆಸ್ ಸೇರುವ ಬಗ್ಗೆ ನಾನಿನ್ನೂ ನಿರ್ಧರಿಸಿಲ್ಲ” ಎಂದು ಹೇಳಿದರು.
ಶನಿವಾರ ಬಿಜೆಪಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದ ಶೆಟ್ಟರ್, ”ಬಿಜೆಪಿ ಲಿಂಗಾಯತ ನಾಯಕರನ್ನು ಟಾರ್ಗೆಟ್ ಮಾಡುತ್ತಿದ್ದು, ಯೂಸ್ ಆ್ಯಂಡ್ ಥ್ರೋ ನೀತಿಯನ್ನು ಅನುಸರಿಸುತ್ತಿದೆ. ಪಕ್ಷದಲ್ಲಿ ಹಲವಾರು ಲಿಂಗಾಯತ ನಾಯಕರಿಗೆ ಅನ್ಯಾಯ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದಿದ್ದಾರೆ. ಈಗ ಉಳಿದ ಬಿಜೆಪಿ ರಾಜ್ಯ ನಾಯಕರಲ್ಲಿ ನಾನೇ ಹಿರಿಯನಾಗಿದ್ದು, ನನಗೂ ಟಿಕೆಟ್ ನೀಡದೇ ಅವಮಾನ ಮಾಡಲಾಗಿದೆ. ಈ ಬಗ್ಗೆ ಲಿಂಗಾಯತ ಸಮುದಾಯದಲ್ಲಿ ಬೇಸರವಿದೆ” ಎಂದು ಹೇಳಿದರು.
”ನನಗೆ ಟಿಕೆಟ್ ನಿರಾಕರಿಸುವ ಮೂಲಕ ಬಿಜೆಪಿ ಹೈಕಮಾಂಡ್ ನನ್ನನ್ನು ಅವಮಾನಿಸಿದೆ. ಪಕ್ಷದ ರಾಜ್ಯಾಧ್ಯಕ್ಷನಾಗಿ, ವಿರೋಧ ಪಕ್ಷದ ನಾಯಕನಾಗಿ, ಮುಖ್ಯಮಂತ್ರಿಯಾಗಿ ನಾನು ಈ ನಾಡಿಗೆ ಸೇವೆ ಸಲ್ಲಿಸಿದ್ದೇನೆ. ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆಯಾದರೂ, ನಾನೂ ಕೂಡ ಈ ರಾಜ್ಯದಲ್ಲಿ ಪಕ್ಷದ ಬೆಳವಣಿಗೆಯಲ್ಲಿ ಮಹತ್ತರವಾದ ಪಾತ್ರ ನಿರ್ವಹಿಸಿದ್ದೇನೆ” ಎಂದು ಭಾವುಕರಾಗಿ ನುಡಿದರು.