ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಪಶುವೈದ್ಯರ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ.

ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದು, ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಎಫ್ಐಆರ್ಗಳು ದಾಖಲಾಗಿದೆ. ಅವುಗಳಲ್ಲಿ ಎರಡು ಪ್ರಕರಣಗಳನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೂರು ಪ್ರಕರಣಗಳಲ್ಲಿ ಎರಡು ಪ್ರಕರಣಗಳನ್ನು ಡಿಜಿ ಮತ್ತು ಐಜಿಪಿ ಆದೇಶದಂತೆ ಸಿಐಡಿಗೆ ಹಸ್ತಾಂತರಿಸಲಾಗಿದೆ. ಉಳಿದ ಒಂದು ಪ್ರಕರಣ ನ್ಯಾಯಾಲಯದ ಅನುಮತಿಗಾಗಿ ಬಾಕಿಯಿದ್ದು, ಅನುಮತಿ ಸಿಕ್ಕ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಕೆಪಿಎಸ್ಸಿಯ 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಕೆಲವು ಹುದ್ದೆಗಳಿಗೆ 80 ಲಕ್ಷದವರೆಗೆ ಲಂಚ ಪಡೆಯಲಾಗಿದೆ ಎಂಬ ಆರೋಪದ ಆಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದಲ್ಲದೇ ಸುಮಾರು 60 ಶೇಕಡಾ ಹುದ್ದೆಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ಕೆಪಿಎಸ್ಸಿ ಅಭ್ಯರ್ಥಿಗಳು, ಪಶುವೈದ್ಯಾಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳು ಸಮಗ್ರ ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿವೆ. ರಾಜ್ಯ ಬಿಜೆಪಿ ಕೂಡ ಈ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಸದ್ಯ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸಿಐಡಿಗೆ ತನಿಖೆ ವಹಿಸಲಾಗಿದ್ದು, ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆದು ತಪ್ಪಿತಸ್ಥರಿಗೆ ಕಾನೂನು ಕ್ರಮವಾಗುವ ನಿರೀಕ್ಷೆಯಿದೆ.







