ಬಿಗ್ ಬಾಸ್ ಕನ್ನಡ ಸೀಸನ್ 12ರ( Bigg Boss Kannada season 12 )ಗ್ರ್ಯಾಂಡ್ ಫಿನಾಲೆ ನಿನ್ನೆ ನಡೆದಿದ್ದು, ಬಿಗ್ ಬಾಸ್ ಸೀಸನ್ 12ರ ವಿನ್ನರ್ (Bigg Boss winner) ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ.

ಮಂಡ್ಯ ಹೈದ ಗಿಲ್ಲಿ ನಟ(Gilli Nata) ಈ ಬಾರಿಯ ವಿನ್ನರ್ ಟ್ರೋಫಿಯನ್ನ ಎತ್ತಿ ಹಿಡಿದರೆ ಮಾತಿನ ಮಲ್ಲಿ ರಕ್ಷಿತಾ ಶೆಟ್ಟಿ(Rakshitha shetty) ರನ್ನರ್ ಅಪ್ ಆಗಿ ಹೊರ ಹೊಮ್ಮಿದ್ದಾರೆ. ವಿನ್ನರ್ ಪಟ್ಟಕ್ಕೇರಿರುವ ಗಿಲ್ಲಿ ನಟಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದ್ದು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ(HD Kumaraswamy) ಕೂಡ ಅಭಿನಂದಿಸಿದ್ದಾರೆ.
ಇದನ್ನೂ ಓದಿ: BBK 12: ಮನೆ ಮಗನ ಗೆಲುವು ಸಂಭ್ರಮಿಸಿದ ಜೀ ಕನ್ನಡ: ಬಿಗ್ ಬಾಸ್ ಗೆದ್ದ ಗಿಲ್ಲಿಗೆ ವಿಶೇಷ ಶುಭಾಶಯ
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 12ನೇ ಆವೃತ್ತಿಯಲ್ಲಿ ಅಭೂತಪೂರ್ವ ವಿಜಯ ಸಾಧಿಸಿರುವ ಗಿಲ್ಲಿ ನಟ ಎಂದೇ ಖ್ಯಾತಿಯಾಗಿರುವ ನಟರಾಜ್ ಅವರನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅಭಿನಂದಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು, ಮಂಡ್ಯ ಲೋಕಸಭೆ ಕ್ಷೇತ್ರದ ಮಳವಳ್ಳಿಯ ಅಪ್ಪಟ ಗ್ರಾಮೀಣ ಪ್ರತಿಭೆ ಗಿಲ್ಲಿ ನಟನಿಗೆ (ನಟರಾಜ್) ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಹಳ್ಳಿಯ ರೈತನ ಮಗನಾಗಿ ಹುಟ್ಟಿ ಕನ್ನಡಿಗರೆಲ್ಲರ ಮನಗೆದ್ದಿರುವ ಅವರಿಗೆ ಇನ್ನೂ ಹೆಚ್ಚಿನ ಕೀರ್ತಿ, ಹೆಸರು ಬರಲಿ ಎಂದು ಶುಭ ಹಾರೈಸುತ್ತೇನೆ. ಹಾಗೆಯೇ, ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದ ರಕ್ಷಿತಾ ಶೆಟ್ಟಿ ಅವರಿಗೂ ಅಭಿನಂದನೆಗಳು ಎಂದು ಕುಮಾರಸ್ವಾಮಿ ಶುಭಹಾರೈಸಿದ್ದಾರೆ.














