ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಾಂಗ್ರೆಸ್ ನಡುವೆ ಒಳ ಜಗಳ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ನಡುವಿನ ಶೀತಲ ಸಮರ ಮೇಲ್ನೋಟಕ್ಕೆ ಗೋಚರವಾಗುತ್ತಿದೆ. ಇದೇ ಸಂದರ್ಭವನ್ನು ಬಳಸಿಕೊಂಡು ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎನ್ನುವ ಊಹಾಪೋಹಗಳು ಎಲ್ಲೆಡೆ ಹರಿದಾಡುತ್ತಿದೆ.

ಈ ಬಗ್ಗೆ ಬಿಜೆಪಿ ಹಿರಿಯ ನಾಯಕ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದು, ಯಾವುದೇ ಕಾರಣಕ್ಕೂ ಈ ಸರ್ಕಾರದ ಅಸ್ಥಿರತೆಯನ್ನು ನಾವು ಬಯಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿನ ಕಾಂಗ್ರೆಸ್ ಪರಿಸ್ಥಿತಿಯನ್ನು ಬಳಸಿಕೊಳ್ಳಬೇಕು ಎನ್ನುವ ಯಾವುದೇ ಯೋಚನೆ ನಮ್ಮ ಪಕ್ಷಕ್ಕಿಲ್ಲ. ನಮ್ಮ ಪಕ್ಷದ ನಿಲುವು ಸ್ಪಷ್ಟವಾಗಿದ್ದು, ಈ ಸರ್ಕಾರ ಐದು ವರ್ಷಗಳ ಕಾಲ ತಮ್ಮ ಅವಧಿಯನ್ನು ಮುಗಿಸಬೇಕು ಎಂದರು.
ಇನ್ನು ಇಂಡಿಯಾ ಮೈತ್ರಿಕೂಟದ ಬಗ್ಗೆ ಮಾತನಾಡಿದ ಅವರು, ಇಂಡಿಯಾ ಘಟಬಂಧನ ಹೆಚ್ಚು ದಿನ ಉಳಿಯಲ್ಲ..ನಾವು ಅದಕ್ಕೆ ಪ್ರೋತ್ಸಾಹನೂ ಕೊಡಲ್ಲ. ಅದರ ಸ್ವರೂಪವೇ ಅಸ್ವಾಭಾವಿಕ ಎಂದು ಹೇಳಿದರು.









