ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು 329 ಅಭ್ಯರ್ಥಿಗಳಿಗೆ ನೋಟಿಸ್ ಜಾರಿ ಮಾಡಿದ್ದು, ಎಲ್ಲರೂ ಇಂದೇ ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ವಿಚಾರಣೆ ವೇಳೆ ಕೆಲವರು ಅಕ್ರಮದ ಬಗ್ಗೆ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಸಿಐಡಿ ತನಿಖೆಯನ್ನು ತೀವ್ರಗೊಳಿಸಿದೆ. ಈ ಮಾಹಿತಿಯ ಆಧಾರದಲ್ಲಿ ಅಭ್ಯರ್ಥಿಗಳನ್ನು ವಿಚಾರಣೆ ನಡೆಸಿ ಅಕ್ರಮದ ಸಂಪೂರ್ಣ ಜಾಲದ ಬಗ್ಗೆ ಮಾಹಿತಿ ಕಲೆಹಾಕಲು ಅಧಿಕಾರಿಗಳು ಮುಂದಾಗಿದ್ದಾರೆ.

ಇನ್ನು, 329 ಅಭ್ಯರ್ಥಿಗಳಿಂದ ವಶಪಡಿಸಿಕೊಳ್ಳಲಾಗಿರುವ 658 ಓಎಂಆರ್ ಕಾರ್ಬನ್ ಶೀಟ್‌ಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ಅಭ್ಯರ್ಥಿಗಳ ಓಎಂಆರ್ ಶೀಟ್‌ಗಳೊಂದಿಗೆ ಕಾರ್ಬನ್ ಶೀಟ್‌ಗಳನ್ನು ಹೋಲಿಕೆ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ.

ಅಭ್ಯರ್ಥಿಗಳ ವಿಚಾರಣೆ ಮತ್ತು ಎಫ್‌ಎಸ್‌ಎಲ್ ವರದಿ ಬಳಿಕ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿ ಹೊರಬರುವ ಸಾಧ್ಯತೆ ಇದೆ. ಪ್ರಕರಣದಲ್ಲಿ ಪ್ರಭಾವಿಗಳ ಪಾತ್ರವಿದೆಯೇ ಎಂಬ ಬಗ್ಗೆಯೂ ಸಿಐಡಿ ತನಿಖೆ ಮುಂದುವರಿಸಿದೆ.







