ರಾಜ್ಯ ಬಿಜೆಪಿ ಸರ್ಕಾರದ ಮೇಲೆ ಕೇಳಿ ಬಂದಿರುವ 40% ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳೊಂದಿಗೆ ದೂರು ನೀಡಿದರೆ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಸರ್ಕಾರಿ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂಬ ರಾಜ್ಯ ಸರ್ಕಾರಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ.

ಈ ಹಿಂದೆಯೂ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಇದೇ ರೀತಿ ಆರೋಪಿಸಿ ಪ್ರಧಾನಿಗೆ ಪತ್ರ ಬರೆದಿದ್ದರು. ನಾನು ಖುದ್ದಾಗಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಜೊತೆ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿ ಇತ್ಯರ್ಥಕ್ಕೆ ಕ್ರಮ ಕೈಗೊಂಡಿದ್ದೆ ಎಂದಿದ್ದಾರೆ.
ಯಾರೇ ಆಗಲಿ ಆರೋಪ ಮಾಡುವುದಕ್ಕಿಂತ ಮುನ್ನ ಆಧಾರವನ್ನಿಟ್ಟುಕೊಂಡು ಮಾಡಿದರೆ ಕಾನೂನು ಕ್ರಮ ಜರುಗಿಸಲು ಸಾಧ್ಯವಾಗುತ್ತದೆ. ಆಧಾರವಿಲ್ಲದೆ ಆರೋಪ ಮಾಡಿದರೆ ತನಿಖೆ ನಡೆಸಿ ಕ್ರಮ ಜರುಗಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.