ಬೆಂಗಳೂರು: ರಾಜ್ಯದ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಸುಮಾರು ಏಳು ಗಂಟೆಗಳ ಕಾಲ ಮ್ಯಾರಥಾನ್ ಸಭೆ ನಡೆಸಿದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಆಡಳಿತ ಯಂತ್ರಕ್ಕೆ ಹಲವು ಮಹತ್ವದ ನಿರ್ದೇಶನಗಳನ್ನು ನೀಡಿದ್ದಾರೆ. “ಟೀಮ್ ಕರ್ನಾಟಕ” ಪರಿಕಲ್ಪನೆಯಡಿ ಅಧಿಕಾರಿಗಳು ಜನಸೇವೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಬಳಿ ತರುತ್ತಾರೆ. ಆದ್ದರಿಂದ ಅಧಿಕಾರಿಗಳು ಸಮಯ ಪಾಲನೆ ಮಾಡಿ ಬೆಳಿಗ್ಗೆ 10 ಗಂಟೆಗೆ ಕಚೇರಿಗೆ ಹಾಜರಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸೂಚಿಸಿದರು.
ಶೈಕ್ಷಣಿಕ ವರ್ಷ ಆರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳು ಸಮಯಕ್ಕೆ ತಲುಪುವಂತೆ ನೋಡಿಕೊಳ್ಳಬೇಕು. ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಶೂನ್ಯವಾಗಿರುವ ಬಗ್ಗೆ ಗಮನ ಹರಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಮಳೆಗಾಲ ಆರಂಭವಾಗಿರುವುದರಿಂದ ಅಗ್ನಿಶಾಮಕ ದಳ ಸೇರಿದಂತೆ ಎಲ್ಲ ಇಲಾಖೆಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಜನರೊಂದಿಗೆ ಸಂಪರ್ಕದಲ್ಲಿದ್ದು ಮತದಾನದ ಹಕ್ಕು ಸಂರಕ್ಷಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಗೃಹಲಕ್ಷ್ಮಿ ಯೋಜನೆ ಕುರಿತು ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ, “ಯಾವುದೇ ಫಲಾನುಭವಿಯ ಗೃಹಲಕ್ಷ್ಮಿ ಹಣವನ್ನು ನಿಲ್ಲಿಸುವುದಿಲ್ಲ” ಎಂದು ಭರವಸೆ ನೀಡಿದರು. ಗೃಹಜ್ಯೋತಿ ಯೋಜನೆಯನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸಲು ಅವಕಾಶ ನೀಡುವುದಿಲ್ಲ ಮತ್ತು ಯೋಜನೆಯಲ್ಲಿ ಕೆಲವು ಪರಿಷ್ಕರಣೆಗಳನ್ನು ತರಲಾಗುವುದು ಎಂದು ಹೇಳಿದರು.

ಗ್ರಾಮೀಣ ಅಭಿವೃದ್ಧಿಗೆ ಹೊಸ CSR ನೀತಿಯನ್ನು ಜಾರಿಗೆ ತರಲಾಗುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಅನುದಾನ ಹರಿಸುವ ಉದ್ದೇಶವಿದೆ. ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ನಗರಗಳಿಗೆ ವಲಸೆ ಹೋಗುವುದನ್ನು ತಡೆಯಲು ಗ್ರಾಮೀಣ ಭಾಗಗಳಲ್ಲಿಯೇ ಉತ್ತಮ ಶಿಕ್ಷಣ ಸೌಲಭ್ಯ ಕಲ್ಪಿಸುವ ಯೋಜನೆಯೂ ಸರ್ಕಾರದ ಮುಂದಿದೆ ಎಂದು ಹೇಳಿದರು.ಮೀಟರ್ ಬಡ್ಡಿ ದಂಧೆಗೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿ, ಗಾಂಜಾ ಮತ್ತು ಮಾದಕ ವಸ್ತುಗಳ ಜಾಲವನ್ನು ಸಂಪೂರ್ಣವಾಗಿ ಮಟ್ಟಹಾಕುವಂತೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದರು.
ರಾಜ್ಯದ ಪ್ರತಿಯೊಂದು ಜಿಲ್ಲಾ ಕೇಂದ್ರಕ್ಕೂ ರಿಂಗ್ ರೋಡ್ ನಿರ್ಮಾಣ ಹಾಗೂ ಮೊಬಿಲಿಟಿ ಯೋಜನೆಗಳ ರೂಪುರೇಷೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.ಯುವಕರ ಸಬಲೀಕರಣಕ್ಕಾಗಿ “ಭಾರತ್ ಜೋಡೋ ಯುವಕರ ಸಂಘ” ಎಂಬ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಘೋಷಿಸಿದ ಮುಖ್ಯಮಂತ್ರಿ, ರಾಜ್ಯದ ಸುಮಾರು 6,000 ಗ್ರಾಮ ಪಂಚಾಯಿತಿಗಳಲ್ಲಿ ಯುವಕರ ಸಂಘಗಳನ್ನು ರಚಿಸಿ ಕ್ರೀಡೆ ಮತ್ತು ಮನರಂಜನಾ ಚಟುವಟಿಕೆಗಳಿಗೆ ಉತ್ತೇಜನ ನೀಡಲಾಗುವುದು ಎಂದು ತಿಳಿಸಿದರು. ಪ್ರತಿ ಗ್ರಾಮ ಪಂಚಾಯಿತಿಗೆ ₹10 ಲಕ್ಷ ಅನುದಾನ ನೀಡುವ ಪ್ರಸ್ತಾವನೆಯೂ ಇದೆ ಎಂದು ಹೇಳಿದರು.

“ಲಂಚ ಮುಕ್ತ ಕರ್ನಾಟಕ” ನಿರ್ಮಾಣ ಸರ್ಕಾರದ ಗುರಿಯಾಗಿದ್ದು, ಯಾವುದೇ ಮಂತ್ರಿ, ಶಾಸಕ ಅಥವಾ ಅಧಿಕಾರಿ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಜಾತಿ-ಧರ್ಮದ ಆಧಾರದ ಮೇಲೆ ಯಾವುದೇ ತಾರತಮ್ಯ ನಡೆಯುವುದಿಲ್ಲ ಎಂದೂ ಸ್ಪಷ್ಟಪಡಿಸಿದರು.
ಸೈಬರ್ ಅಪರಾಧ ತಡೆಗೂ ಸರ್ಕಾರ ವಿಶೇಷ ಆದ್ಯತೆ ನೀಡಿದ್ದು, ರಾಜ್ಯದ ಪ್ರತಿಯೊಂದು ಜಿಲ್ಲೆ ಹಾಗೂ ತಾಲ್ಲೂಕಿಗೆ ಭೇಟಿ ನೀಡಿ ಜನಸಂಪರ್ಕ ಸಭೆಗಳನ್ನು ನಡೆಸುವುದಾಗಿ ಮುಖ್ಯಮಂತ್ರಿ ಘೋಷಿಸಿದರು. ಅಧಿಕಾರಿಗಳು ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಹಾಸ್ಟೆಲ್‌ಗಳ ಸ್ಥಿತಿಗತಿಗಳನ್ನು ಪರಿಶೀಲಿಸಬೇಕು. ವಿದ್ಯಾರ್ಥಿಗಳಿಗೆ ನೀಡುವ ಆಹಾರದ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳೇ ಊಟ ಮಾಡಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.






