ಬೆಂಗಳೂರು: ರಾಜ್ಯದಲ್ಲಿ ಗೃಹ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಶಾಸಕ ಡಾ.ಸಿ.ಎನ್ ಅಶ್ವಥ್ ನಾರಾಯಣ್(Ashwath Narayan) ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಹಾಗೂ ಗೃಹ ಸಚಿವ ಪರಮೇಶ್ವರ್(G Parameshwara) ವಿರುದ್ಧ ಕಿಡಿಕಾರಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, ರಾಜ್ಯದಲ್ಲಿ ವಿವಿಧ ರೀತಿಯ ಮಾದಕ ವಸ್ತುಗಳು ವ್ಯವಸ್ಥಿತವಾಗಿ ತಯಾರಾಗಿ, ಸಾಗಣೆ ಹಾಗೂ ಮಾರಾಟವಾಗುತ್ತಿದ್ದು, ಇದನ್ನು ತಡೆಗಟ್ಟುವಲ್ಲಿ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

ʼಇದು ಸಣ್ಣ ಮಟ್ಟದ ಸಮಸ್ಯೆಯಲ್ಲ. ಕೋಟ್ಯಂತರ ರೂಪಾಯಿ ಮೌಲ್ಯದ ಡ್ರಗ್ಸ್ ಜಾಲ ರಾಜ್ಯಾದ್ಯಂತ ವ್ಯಾಪಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರದ ಪೊಲೀಸರು ಬಂದು ಕಲಬುರಗಿಯಲ್ಲಿ, ಮೈಸೂರಿನಲ್ಲಿ ದಾಳಿ ನಡೆಸುತ್ತಿರುವುದು ನಮ್ಮ ಗೃಹ ಇಲಾಖೆಯ ಅಸಮರ್ಥತೆಯನ್ನು ತೋರಿಸುತ್ತದೆ. ಮಹಾರಾಷ್ಟ್ರ ಪೊಲೀಸರಿಗೆ ಗೊತ್ತಾಗುವ ವಿಷಯ ನಮ್ಮ ಪೊಲೀಸರಿಗೆ, ಸರಕಾರಕ್ಕೆ ಗೊತ್ತಾಗುವುದಿಲ್ಲವೇ? ಎಂದು ಪ್ರಶ್ನಿಸಿದರು.

ನಾರ್ಕೋಟಿಕ್ಸ್ ವಿಭಾಗದ ಕಾರ್ಯವೈಖರಿ, ಇಂಟೆಲಿಜೆನ್ಸ್ ವ್ಯವಸ್ಥೆ ಮತ್ತು ಪೊಲೀಸ್ ಇಲಾಖೆಯ ವರ್ಗಾವಣೆಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಕಿಡಿಕಾರಿದರು. ಪೋಲೀಸ್ ಠಾಣೆಗಳು ಮತ್ತು ಹುದ್ದೆಗಳು ಮಾರಾಟಕ್ಕೆ ಇಟ್ಟಂತೆ ಆಗಿವೆ. ಇದರಿಂದ ಯುವಕರ ಭವಿಷ್ಯ ಸಂಪೂರ್ಣವಾಗಿ ನಾಶವಾಗುತ್ತಿದೆ ಎಂದು ಹೇಳಿದರು.

ಪೊಲೀಸ್ ಇಲಾಖೆ, ಡಿಜಿಪಿ, ಗೃಹ ಸಚಿವರು ಯಾವ ರೀತಿ ಕಾರ್ಯನಿರ್ವಹಿಸುತ್ತಿದ್ದಾರೆ? ಮುಖ್ಯಮಂತ್ರಿಗಳು ತಮ್ಮ ಕುರ್ಚಿ ಉಳಿಸಿಕೊಳ್ಳುವುದರಲ್ಲೇ ಬ್ಯುಸಿಯಾಗಿದ್ದಾರೆ. ಉಪ ಮುಖ್ಯಮಂತ್ರಿಗಳು ಯಾವಾಗ ಮುಖ್ಯಮಂತ್ರಿ ಕುರ್ಚಿ ಏರುತ್ತೇನೋ ಎಂದು ಕಾರ್ಯತಂತ್ರಗಳನ್ನು ಹೆಣೆಯುತ್ತಿದ್ದಾರೆ. ಪೊಲೀಸ್ ಇಲಾಖೆ ವರ್ಗಾವಣೆ ದಂಧೆಯಲ್ಲಿ ಮುಳುಗಿದ್ದು, ಇಲಾಖೆಯನ್ನೇ ಮಾರಾಟಕ್ಕೆ ಇಟ್ಟುಬಿಟ್ಟಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಈ ಸರಕಾರದಿಂದ ನಾವು ಏನನನ್ನು ಬಯಸಬಹುದು? ಎಂದು ಪ್ರಶ್ನಿಸಿದರು.

ಅಧಿಕಾರದಲ್ಲಿ, ಆಡಳಿತದಲ್ಲಿ 50-60 ವರ್ಷದ ಅನುಭವ ಉಳ್ಳ ವ್ಯಕ್ತಿಗಳು ಕಳಪೆ ಮಟ್ಟದ ಆಡಳಿತವನ್ನು ನಡೆಸುತ್ತಿರುವುದು ಯುವಕರ ಭವಿಷ್ಯಕ್ಕೆ ಅಂಧಕಾರ ತಂದಿದೆ. ಈ ಎಲ್ಲಾ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ನೈತಿಕ ಹೊಣೆ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು, ಡ್ರಗ್ಸ್ ಮಾಫಿಯಾಗಳು ಆಡಳಿತದ ಮೇಲೆ ಪ್ರಭಾವ ಬೀರುವ ಹಂತಕ್ಕೆ ಬಂದಿವೆ ಎಂದರು.






