ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಅಜ್ಜವಾರ ಗೇಟ್ ಬಳಿ ನಿನ್ನೆ ರಾತ್ರಿ ಭೀಕರ ರಸ್ತೆ ಅಪಫಾತ ಸಂಭವಿಸಿದ್ದು, ನಾಲ್ವರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮನೋಜ್, ನರಸಿಂಹಮೂರ್ತಿ, ನಂದೀಶ್ ಹಾಗೂ ಅರುಣ್ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ಮೃತ ಯುವಕರು ಒಂದೇ ಬೈಕ್‌ನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಈ ವೇಳೆ ಅಜ್ಜವಾರ ಗೇಟ್ ಸಮೀಪ ಎದುರಿಗೆ ಬಂದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎದೆ ಎತ್ತರಕ್ಕೆ ಬೆಳೆದ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಇನ್ನು ಚಿಕ್ಕಬಳ್ಳಾಪುರದಲ್ಲಿ ನಡೆದ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaih) ಪ್ರತಿಕ್ರಿಯಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲು ಸೂಚನೆ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಚಿಕ್ಕಬಳ್ಳಾಪುರ ನಗರದ ಹೊರವಲಯದ ಅಜ್ಜವಾರ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಸಾವಿಗೀಡಾದ ವಿಚಾರ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಕ್ರಿಸ್‌ಮಸ್ ಸಂಭ್ರಮದಲ್ಲಿದ್ದ ಕುಟುಂಬಗಳು ಹೀಗೆ ಸೂತಕದ ಮನೆಯಾಗಿ ಬದಲಾದುದ್ದು ದುರದೃಷ್ಟಕರ. ಮನೆಗೆ ಆಧಾರವಾಗಿದ್ದ ಈ ಹುಡುಗರ ನಿಧನದಿಂದ ಸಂಕಷ್ಟದಲ್ಲಿರುವ ಅವರ ಕುಟುಂಬಕ್ಕೆ ನೆರವಾಗಲು ತಲಾ ರೂ.5 ಲಕ್ಷ ಪರಿಹಾರ ನೀಡುತ್ತಿದ್ದೇವೆ. ತಮ್ಮವರನ್ನು ಕಳೆದುಕೊಂಡು ನೋವಿನಲ್ಲಿರುವ ಜೀವಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.












