ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಮುಖ್ಯಮಂತ್ರಿ(Chief Minister) ಸಿದ್ದರಾಮಯ್ಯ(Siddaramaiah) ಅವರು ಇಂದು(ಗುರುವಾರ) ಕೊಡಗು(Kodagu) ಜಿಲ್ಲಾ(District) ಪ್ರವಾಸ ಕೈಗೊಂಡಿದ್ದಾರೆ. ಕಳೆದ ಬಾರಿ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ(Egg) ಎಸೆದು ಅವಮಾನಿಸಲಾಗಿತ್ತು. ಈ ಘಟನೆ ನಡೆದ ಒಂದೂವರೆ ವರ್ಷದ ನಂತರದಲ್ಲಿ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದು, ಸಿಎಂ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ.

ಒಂದೂವರೆ ವರ್ಷದ ಹಿಂದೆ ಪ್ರಕೃತಿ ವಿಕೋಪ ಹಾನಿ ಪರಿಶೀಲಿಸಲು ಕೊಡಗಿಗೆ ಪ್ರತಿಪಕ್ಷ ನಾಯಕರಾಗಿ ಆಗಮಿಸಿದ್ದ ಸಿದ್ದರಾಮಯ್ಯ ಅವರ ತೆರಳುತ್ತಿದ್ದ ಕಾರಿಗೆ ಮೊಟ್ಟೆ ಎಸೆಯುವ ಮೂಲಕ ಅಪಮಾನ ಮಾಡಲಾಗಿತ್ತು. ಟಿಪ್ಪು ಜಯಂತಿ ಆಚರಣೆಗೆ ಅವಕಾಶ ಮಾಡಿಕೊಟ್ಟಿದ್ದಾರೆಂಬ ಕಾರಣಕ್ಕಾಗಿ ಸಿಎಂ ವಿರುದ್ಧ ಪ್ರತಿಭಟನೆ ನಡೆದಿತ್ತು. ಮಡಿಕೇರಿ, ಗುಡ್ಡೆಹೊಸೂರಿನಲ್ಲಿ ಸಿದ್ದರಾಮಯ್ಯ ಅವರು ತೆರಳುತ್ತಿದ್ದ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ತಿತಿಮತಿಯಲ್ಲಿ ಬಿಜೆಪಿ ಕಾರ್ಯಕರ್ತರು ಕಪ್ಪುಬಾವುಟ ಪ್ರದರ್ಶಿಸಿದರು. ಸೋಮವಾರಪೇಟೆ, ಕೊಡ್ಲಿಪೇಟೆ ಭಾಗದಲ್ಲಿಯೂ ಸಿಎಂ ತೆರಳುತ್ತಿದ್ದ ವಾಹನದ ಮೇಲೆ ದಾಳಿ ನಡೆದಿತ್ತು. ಕೊಡಗು ಪೊಲೀಸರ ವೈಫಲ್ಯಕ್ಕೆ ಸ್ವತಃ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಶಾಶ್ವತವಾಗಿ ಅಧಿಕಾರದಲ್ಲಿ ಇರುವುದಿಲ್ಲ. 6 ತಿಂಗಳ ಬಳಿಕ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಕಿಡಿಕಾರಿದ್ದರು.

ಇದೀಗ ಮುಖ್ಯಮಂತ್ರಿ ಹುದ್ದೆ ಯೊಂದಿಗೆ ಮೊದಲ ಬಾರಿಗೆ ಇಂದು ಕೊಡಗಿಗೆ ಆಗಮಿಸುತ್ತಿರುವುದು ಎಲ್ಲರ ಗಮನ ಸೆಳೆಯುವಂತೆ ಮಾಡಿದೆ. ಗುರುವಾರ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ವಿರಾಜಪೇಟೆ ಸಂತ ಅನ್ನಮ್ಮ ವಿದ್ಯಾಸಂಸ್ಥೆ ಆವರಣದಲ್ಲಿ ಆಯೋಜಿಸಿರುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ. ವಿರಾಜಪೇಟೆ ಕಾರ್ಯಕ್ರಮದ ಬಳಿಕ ಮಡಿಕೇರಿಗೆ ಆಗಮಿಸುವ ಮುಖ್ಯಮಂತ್ರಿ, ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಕಟ್ಟಡ ಉದ್ಘಾಟಿಸುವುದರೊಂದಿಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ತದನಂತರ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಆಯೋಜಿಸಿರುವ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.