ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೊರೈಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಶಿವಕುಮಾರ್ ಅವರ ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ದತೆ ಮತ್ತು ಕಠಿಣ ಶ್ರಮ ನಮ್ಮ ಪಕ್ಷದ ಎಲ್ಲ ಯುವನಾಯಕರಿಗೆ ಮಾದರಿಯಾದುದು. ವಿರೋಧ ಪಕ್ಷವಾದ ಬಿಜೆಪಿ ಸುಳ್ಳು ಕೇಸ್ ಗಳನ್ನು ಹಾಕಿ ಬಗೆಬಗೆಯ ಕಿರುಕಳ ನೀಡಿದರೂ ಶಿವಕುಮಾರ್ ಅವರು ಮಣಿಯದೆ ಪಕ್ಷಕ್ಕೆ ನಿಷ್ಠರಾಗಿ ಉಳಿದಿರುವುದು ಕಾಂಗ್ರೆಸ್ ಪಕ್ಷದ ಬಗ್ಗೆ ಅವರಲ್ಲಿರುವ ರಾಜಿಯಿಲ್ಲದ ನಿಷ್ಠೆಗೆ ಸಾಕ್ಷಿಯಾಗಿದೆ ಎಂದು ಬಣ್ಣಿಸಿದ್ದಾರೆ.
ಇದು ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ಸ್ಪೂರ್ತಿದಾಯಕ ನಡವಳಿಕೆ ಆಗಿದೆ. ಕೋಮುವಾದಿ ಶಕ್ತಿಗಳನ್ನು ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಜೊತೆಯಲ್ಲಿ ಡಿ.ಕೆ. ಶಿವಕುಮಾರ್ ಹಗಲಿರುಳು ದುಡಿದಿದ್ದಾರೆ. ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ಮತ್ತೆ ಕಟ್ಟುವಲ್ಲಿ ಶಿವಕುಮಾರ್ ನನ್ನ ಹೆಗಲಿಗೆ ಹೆಗಲಾಗಿ ನಿಂತಿದ್ದಾರೆ ಎಂದು ಸಿದ್ದರಾಮಯ್ಯ ಸ್ಮರಿಸಿದ್ದಾರೆ.
ಇದನ್ನೂ ಓದಿ : ಇಂದಿನಿಂದ ಹೋಟೆಲ್ ಬಂದ್ ? ಹೋಟೆಲ್ ಸಂಘದವರು ಹೇಳಿದ್ದೆನು
ನನಗಿಂತ ಕಿರಿಯರಾದ ಶಿವಕುಮಾರ್ ಅವರಿಗೆ ಉಜ್ವಲವಾದ ರಾಜಕೀಯ ಭವಿಷ್ಯವಿದೆ. 2028ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎನ್ನುವುದು ನಮ್ಮೆಲ್ಲರ ಬಯಕೆಯಾಗಿದೆ. ಇದಕ್ಕಾಗಿ ನಡೆಯುವ ಪಕ್ಷದ ಸಂಘಟನೆ ಮತ್ತು ಹೋರಾಟದಲ್ಲಿ ನಾನು ಕೂಡಾ ಜೊತೆಯಿರುತ್ತೇನೆ ಎಂದು ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಬೆನ್ನಿಗೆ ನಿಲ್ಲುವುದಾಗಿ ಭರವಸೆ ನೀಡಿದ್ದಾರೆ.
ಸದ್ಯ ಕಾಂಗ್ರೆಸ್ ಪಾಳಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿವೆ. ಈಗಾಗಲೇ ಸಿಎಂ ಪಟ್ಟವನ್ನು ದಕ್ಕಿಸಿಕೊಳ್ಳುವುದಕ್ಕಾಗಿ ಡಿಕೆ ಶಿವಕುಮಾರ್ ಹಲವು ಸುತ್ತಿನ ಕಸರತ್ತುಗಳನ್ನು ನಡೆಸಿದ್ದಾರೆ. ಆದರೆ ಸಿದ್ದರಾಮಯ್ಯ ಇದುವರೆಗೂ ಸ್ಥಾನ ತ್ಯಜಿಸಲು ಮುಂದಾಗಿಲ್ಲ. ಹೀಗಾಗಿ ಈ ಇಬ್ಬರ ನಡುವಿನ ಮುಸುಕಿನ ಗುದ್ದಾಟ ಇನ್ನೂ ಮುಂದುವರೆದಿದ್ದು, ಈ ನಡುವೆಯೇ ಇದೀಗ ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಅವರ ಸಂಘಟನಾ ಶಕ್ತಿಯನ್ನು ಶ್ಲಾಘಿಸಿರುವುದು ಕುತೂಹಲ ಮೂಡಿಸಿದೆ.






