ಬೆಂಗಳೂರು: ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಇಂದು ಮತದಾನ ನಡೆಸುತ್ತಿದ್ದು, ಬಹುತೇಕ ಮತದಾನ ಪೂರ್ಣಗೊಂಡಿದೆ. ಸಂಖ್ಯಾಬಲದ ಆಧಾರದಲ್ಲಿ ಕಾಂಗ್ರೆಸ್ 4 ಸ್ಥಾನಗಳು ಹಾಗೂ ಬಿಜೆಪಿ 2 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಉಳಿದ ಒಂದು ಸ್ಥಾನಕ್ಕಾಗಿ ಕಾಂಗ್ರೆಸ್- ಜೆಡಿಎಸ್ ನಡುವೆ ತೀವ್ರ ಪೈಪೋಟಿ ಇದೆ.

ಈ ಬಗ್ಗೆ ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದು, ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಐದೂ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಮತ್ತು ಪಕ್ಷದ ಮುಖಂಡರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದ್ದಾರೆ. ಅದರ ಫಲವಾಗಿ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳಿಗೆ ಸ್ಪಷ್ಟ ಗೆಲುವು ದೊರೆಯಲಿದೆ ಎಂದು ಹೇಳಿದರು.

ಈ ವೇಳೆ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಜೆಡಿಎಸ್‌ನವರು ಕಾಂಗ್ರೆಸ್ ಪಕ್ಷದ ಹತ್ತಿರಕ್ಕೂ ಬರಲು ಸಾಧ್ಯವಿಲ್ಲ. ನಮ್ಮ ಅಭ್ಯರ್ಥಿಗಳ ಗೆಲುವು ನಿಶ್ಚಿತವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ನ ಐವರು ಅಭ್ಯರ್ಥಿಗಳು ಜಯಗಳಿಸಲಿದ್ದು, ಅದರ ಅಂಗವಾಗಿ ಇಂದು ಸಂಜೆ ವಿಜಯೋತ್ಸವ ಆಚರಿಸಲಾಗುವುದು ಎಂದರು.






