ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಇದೇ ಮೊದಲ ಬಾರಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಈ ಮೂಲಕ ಕಾಂಗ್ರೆಸ್ ಪಕ್ಷ ಇತಿಹಾಸ ನಿರ್ಮಿಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಬಣ್ಣಿಸಿದರು.
ದಕ್ಷಿಣ ಪದವೀಧರ ಕ್ಷೇತ್ರದ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್, ಪದವೀಧರ ಕ್ಷೇತ್ರದಲ್ಲಿ ಇದೇ ಮೊದಲ ಬಾರಿ ಪದವೀಧರರು ಕಾಂಗ್ರೆಸ್ ಪಕ್ಷದ ಕೈ ಹಿಡಿದಿದ್ದಾರೆ. ಇದಕ್ಕಾಗಿ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಪಕ್ಷದ ಸಂಘಟಿತ ಹೋರಾಟದ ಫಲವಾಗಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ. ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಹಾಗೂ ಅವರ ಬೆಂಬಲಿಗರು ಕಾಂಗ್ರೆಸ್ ಗೆ ಬೆಂಬಲ ನೀಡಿದ್ದರಿಂದ ಗೆಲುವು ಲಭಿಸಿದೆ. ಈ ಚುನಾವಣೆ ಫಲಿತಾಂಶ ಮುಂಬರುವ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ವಿಶ್ಲೇಷಿಸಿದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿನಾಕಾರಣ ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡಲಾಗುತ್ತಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ, ರಾಹುಲ್ ಗಾಂಧಿ ಹಾಗೂ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಐಟಿ ಇಡಿ ಬಳಸಿಕೊಂಡು ಕಿರುಕುಳ ನೀಡಲಾಗುತ್ತಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಈ ಬಗ್ಗೆ ದೆಹಲಿಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದ ಕಾಂಗ್ರೆಸ್ ಹಿರಿಯ ನಾಯಕರಾದ ಪಿ ಚಿದಂಬರಂ, ವೇಣುಗೋಪಾಲ್, ಸಂಸದ ಡಿ ಕೆ ಸುರೇಶ್ ರನ್ನು ಅತ್ಯಂತ ಹೀನಾಯವಾಗಿ ನಡೆಸಿಕೊಳ್ಳಲಾಗಿದೆ. ಕಾಂಗ್ರೆಸ್ ನಾಯಕರ ವಿರುದ್ಧ ದೆಹಲಿ ಪೊಲೀಸರು ಗೂಂಡಾಗಿರಿ ಮಾಡಿದ್ದಾರೆ ಎಂದು ಆರ್ ಧ್ರುವನಾರಾಯಣ್ ಆರೋಪಿಸಿದರು.






