ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ , ಸಂವಿಧಾನ ವಿರೋಧಿ ಕೃತ್ಯದಲ್ಲಿ ಭಾಗವಹಿಸಿದ್ರೆ, ಬಜರಂಗದಳ ಮತ್ತು ಪಿಎಫ್ಐ ಸಂಘಟನೆಗಳನ್ನು ನಿಷೇಧ ಮಾಡುವುದಾಗಿ ಭರವಸೆ ನೀಡಿದ್ದು, ಇದನ್ನು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.
ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಬಿತ್ತಿ ವಿಭಜನೆಗೆ ಕಾರಣವಾಗುವ ಯಾವುದೇ ಶಕ್ತಿಗಳನ್ನು ಸಹಿಸುವುದಿಲ್ಲ. ಬಜರಂಗದಳ, ಪಿಎಫ್ಐ ಸೇರಿದಂತೆ ಯಾವುದೇ ವ್ಯಕ್ತಿ ಅಥವಾ ಸಂಘಟನೆಗಳಾದರೂ ನಿಷೇಧ ಮಾಡುವುದರ ಜೊತೆಗೆ ಬಲವಾದ ಕಾನೂನು ಕ್ರಮ ಕೈಗೊಳ್ಳುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದು, ಬಜರಂಗದಳ ನಿಷೇಧಿಸುವುದಾಗಿ ಕಾಂಗ್ರೆಸ್ ಪಕ್ಷ ಘೋಷಿಸಿದೆ. ಕಾಂಗ್ರೆಸ್ನ ಈ ಪ್ರಣಾಳಿಕೆಯಲ್ಲಿ ಹೊಸ ತಂತ್ರ ಅಡಗಿದೆ. ಕಾಂಗ್ರೆಸ್ನವರಿಗೆ ಹನುಮಂತನನ್ನು ಕಂಡರೂ ಆಗಿಬರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಸರ್ವ ಜನಾಂಗದ ಶಾಂತಿಯ ತೋಟ ಇದುವೆ ಕಾಂಗ್ರೆಸ್ ಬದ್ಧತೆ ಎನ್ನುವ ಹೆಸರಿನಲ್ಲಿ ಪ್ರಣಾಳಿಕೆಯಲ್ಲಿ ಧರ್ಮ ಮತ್ತು ಜಾತಿ ಹೆಸರಿನಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಸಂಘಟನೆ ಅಥವಾ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿತ್ತು.
ಬಜರಂಗದಳವನ್ನು ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿದ್ದಕ್ಕೆ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಆಕ್ರೋಶ ವ್ಯಕ್ತಪಡಿಸಿದೆ. ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ಕಾಂಗ್ರೆಸ್ ಮುಸ್ಲಿಂ ಸಮುದಾಯ ಒಲೈಕೆ ಮಾಡಲು ಬಜರಂಗದಳ ಬ್ಯಾನ್ ಮಾಡುವುದಾಗಿ ಹೇಳುತ್ತಿದೆ. ಇವರಿಗೆ ಭಯೋತ್ಪಾದಕ ಕೃತ್ಯದಲ್ಲಿ ತೊಡಗಿದ್ದ ಸಂಘಟನೆಗಳು ಕಾಣಿಸಲೇ ಇಲ್ಲ. ಆದರೆ ಇಂತಹ ಸಂಘಟನೆಗಳನ್ನು ಬಿಜೆಪಿ ನಿಷೇಧಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಮಾಡುತ್ತೇವೆ ಎಂದು ಹೇಳುತ್ತಿದೆ. ಆದರೆ ಬಿಜೆಪಿ ಉಗ್ರ ಸಂಘಟನೆಗಳನ್ನು ನಿಷೇಧ ಮಾಡಿದೆ. ಮುಸ್ಲಿಂ ಸಮುದಾಯವನ್ನು ಓಲೈಸಲು ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ಟೀಕಿಸಿದ್ದಾರೆ