ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕದನ ಜೋರಾಗಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ನಡುವೆ ನಡೆಯುತ್ತಿರುವ ಶೀತಲ ಸಮರ ಕಾಂಗ್ರೆಸ್ ಹೈಕಮಾಂಡ್ ನಾಯಕರ ನೆಮ್ಮದಿ ಕೆಡಿಸಿದೆ.

ಕರ್ನಾಟಕ ಕಾಂಗ್ರೆಸ್‌ನ ಒಳ ಜಗಳದ ಚಂಡು ಈಗ ದೆಹಲಿಯ ಹೈಕಮಾಂಡ್ ನಾಯಕರ ಅಂಗಳದಲ್ಲಿದೆ. ಹೀಗಾಗಿ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆ ನಡೆಸುವ ಸಾಧ್ಯತೆ ಹೆಚ್ಚಾಗಿದೆ.

ಇನ್ನು ಕಳೆದ ಮೂರು ದಿನಗಳಿಂದ ರಾಜ್ಯ ನಾಯಕರ ಅಹವಾಲು ಆಲಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ದೆಹಲಿಗೆ ತೆರಳುತ್ತಿದ್ದಾರೆ. ಈ ವೇಳೆ ಬೆಂಗಳೂರಿನಿಂದ ಹೊರಟ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆಗೆ ಒಂದೇ ಕಾರಿನಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಕೂಡ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ.

ಮೂರು ದಿನಗಳಿಂದ ಬೆಂಗಳೂರಿನಲ್ಲಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಹಿರಿಯ ನಾಯಕರನ್ನು ಭೇಟಿ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದರು. ಆದರೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಮಾತ್ರ ಭೇಟಿಯಾಗಿರಲಿಲ್ಲ. ಆದರೆ ಇದೀಗ ಮಲ್ಲಿಕಾರ್ಜುನ ಖರ್ಗೆ ಅವರು ಕೊನೆಯ ಕ್ಷಣದಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು, ರಾಜ್ಯ ರಾಜಕೀಯದಲ್ಲಿ ಹೆಚ್ಚಿನ ಕುತೂಹಲಕ್ಕೆ ಕಾರಣವಾಗಿದೆ.












