ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಹುಮತದ ಭರವಸೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದೆ. ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಭರ್ಜರಿ ಚುನಾವಣಾ ಪ್ರಚಾರ ನಡೆಸಿದ್ದರೂ ಕೂಡ ಅಂತಿಮವಾಗಿ ಪಕ್ಷವು ಎರಡಂಕಿಯನ್ನೂ ದಾಟದಿರುವುದು ಪಕ್ಷಕ್ಕೆ ತೀವ್ರ ಮುಜುಗರ ತಂದಿದೆ.

ಬಿಹಾರ ಹೀನಾಯ ಸೋಲಿನ ಬೆನ್ನಲ್ಲೇ ಇಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ. ನವದೆಹಲಿಯಲ್ಲಿರುವ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣ ಏನಿರಬಹುದು ಎನ್ನುವ ಬಗ್ಗೆ ಇಬ್ಬರು ನಾಯಕರು ಪರಸ್ಪರ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನು ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಬಳಿಕ ರಾಹುಲ್ ಗಾಂಧಿ ಅವರು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಇನ್ನು ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಕರ್ನಾಟಕದ ಕಾಂಗ್ರೆಸ್ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಬ್ಬರೂ ಬೇರೆ ಬೇರೆಯಾಗಿ ದೆಹಲಿಗೆ ಪ್ರಯಾಣಿಸಿದ್ದಾರೆ. ಅತ್ತ ರಾಹುಲ್ ಗಾಂಧಿ ಮಲ್ಲಿಕಾರ್ಜುನ ಖರ್ಗೆ ಭೇಟಿ ಕುತೂಹಲ ಮೂಡಿಸಿದ್ದರೆ, ಇತ್ತ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಏಕಕಾಲಕ್ಕೆ ದೆಹಲಿಗೆ ಭೇಟಿ ನೀಡಿರುವುದು ಮತ್ತಷ್ಟು ಕುತೂಹಲ ಕೆರಳಿಸಿದೆ.












