ಬೆಳಗಾವಿ: ಬೆಳಗಾವಿ ಚಳಿಗಾಲ ಅಧಿವೇಶನ(Winter session) ಮೂರನೇ ದಿನಕ್ಕೆ ಕಾಲಿಟ್ಟಿದೆ. ಇಂದು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನೆಗಳಿಂದ ಕಟ್ಟಿಹಾಕಲು ವಿಪಕ್ಷ ನಾಯಕರು ತಂತ್ರ ರೂಪಿಸುತ್ತಿದ್ದರೆ, ಅತ್ತ ವಿಪಕ್ಷಗಳ ಪ್ರಶ್ನೆಗೆ ತಕ್ಕ ಉತ್ತರ ಕೊಡಲು ಕಾಂಗ್ರೆಸ್ (Congress) ಸರ್ಕಾರದ ಸಚಿವರು ಹಾಗೂ ಶಾಸಕರು ಸಜ್ಜಾಗಿದ್ದಾರೆ.

ಚಳಿಗಾಲ ಅಧಿವೇಶದ ಹಿನ್ನೆಲೆ ಬೆಳಗಾವಿಯಲ್ಲಿ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ನಡೆದಿದ್ದು, ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯ ವಿಳಂಬವಾಗುತ್ತಿರುವ ಬಗ್ಗೆ ಶಾಸಕರು ನೇರವಾಗಿ ಅಸಮಾಧಾನ ಹೊರಹಾಕಿದ್ದಾರೆ.

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ವಪಕ್ಷದ ಶಾಸಕರೇ ಅಸಮಾಧಾನ ಹೊರಹಾಕಿದ್ದು, ಶ್ರೀಮಂತ ಪ್ರದೇಶದಲ್ಲಿರುವ ಮನೆಗಳಿಗೂ 200 ಯೂನಿಟ್ ವಿದ್ಯುತ್ ಉಚಿತ ಪಡೆದುಕೊಳ್ಳುತ್ತಿದ್ದಾರೆ. ಲಕ್ಷಾಂತರ ರೂಪಾಯಿ ದುಡಿಯುವ ಮಹಿಳೆಯರೂ ಉಚಿತ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಅರ್ಹರು ಮಾತ್ರವಲ್ಲ ಎಲ್ಲರೂ ಗ್ಯಾರಂಟಿ ಯೋಜನೆ ಬಳಸಿಕೊಳ್ಳುತ್ತಿದ್ದಾರೆ.

ಗ್ಯಾರಂಟಿ ಒಂದೇ ಸಾಲದು. ಅಭಿವೃದ್ಧಿ ಮಾಡಬೇಕು. ಜನ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಕೇಳುತ್ತಾರೆ. ಕೇವಲ ಗ್ಯಾರಂಟಿ ಯೋಜನೆಗಳಿಂದ ಮುಂದಿನ ಚುನಾಚಣೆ ಗೆಲ್ಲಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿಗಳ ಮುಂದೆ ಅಭಿವೃದ್ಧಿ ಕಾರ್ಯ ವಿಳಂಬದ ಬಗ್ಗೆ ಕಾಂಗ್ರೆಸ್ ಶಾಸಕರು ಅಸಮಾಧಾನ ಹೊರಹಾಕಿದ್ದಾರೆ.












