ಮಂಡ್ಯ: ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿಗೂ ಮುನ್ನವೇ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದ್ದು, ಮಂಡ್ಯದಲ್ಲಿ ಬೇರು ಬಿಡುವ ಉತ್ಸಾಹದಲ್ಲಿದ್ದ ಬಿಜೆಪಿಗೆ ಮರ್ಮಾಘಾತವಾಗಿದೆ.
ಜಿಲ್ಲೆಯಲ್ಲಿ ಮೊದಲ ಬಾರಿಗೆ ಕಮಲದ ಬಾವುಟ ಹಾರಿಸಿದ್ದವರೇ ಕಾಂಗ್ರೆಸ್ ನತ್ತ ವಾಲುತ್ತಿರುವ ಮಾತುಗಳು ಕೇಳಿಬರುತ್ತಿದ್ದು, ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಕಾಂಗ್ರೆಸ್ ಸೇರ್ಪಡೆ ಬಹುತೇಕ ಫಿಕ್ಸ್ ಆಗಿದೆ.

ಮಂಡ್ಯದ ಕೆ.ಆರ್.ಪೇಟೆಯಲ್ಲಿ ಮಾತನಾಡಿದ ಸಚಿವ ಕೆ.ಸಿ.ನಾರಾಯಣಗೌಡ, ಕಾಂಗ್ರೆಸ್ ನಿಂದ ಆಹ್ವಾನ ಬಂದಿರೋದು ನಿಜ. ಆದರೆ, ಸೇರ್ಪಡೆ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ.ಆಪ್ತರು ಹಾಗೂ ಹಿತೈಷಿಗಳ ಜೊತೆ ಚರ್ಚಿಸಿ ಅಭಿಪ್ರಾಯ ಕೇಳಬೇಕು. ಅಭಿಪ್ರಾಯ ಕೇಳಿದ ಬಳಿಕ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ.ಕೆ.ಆರ್.ಪೇಟೆ ಕಾಂಗ್ರೆಸ್ ನಲ್ಲಿ ನಾಯಕತ್ವದ ಕೊರತೆ ಇದೆ. ಅದಕ್ಕಾಗಿ ಪಕ್ಷಕ್ಕೆ ಬರುವಂತೆ ಒತ್ತಾಯ ಇದೆ. ಯಾವುದೇ ನಿರ್ಧಾರ ಮಾಡಿದ್ರೂ ಮಾಧ್ಯಮಗಳ ಮೂಲಕವೇ ತಿಳಿಸುತ್ತೇನೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಸೇರುವ ಬಗ್ಗೆ ಸಚಿವರು ಸುಳಿವು ನೀಡಿದ್ದಾರೆ.
ಈಗಾಗಲೇ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದ ನಾರಾಯಣಗೌಡ ಬಿಜೆಪಿ ಬಿಟ್ಟು, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಜೊತೆ ಮಾತುಕತೆ ನಡೆಸಿದ್ದಾರೆ.

ಹುಟ್ಟುಹಬ್ಬ ಅಂಗವಾಗಿ ಯಡಿಯೂರಪ್ಪರನ್ನು ಭೇಟಿ ಮಾಡಿ, ಶುಭಾಶಯ ಕೋರಿ, ಪಕ್ಷ ತ್ಯಜಿಸುವ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ನಿಮ್ಮನ್ನು ಸಿಎಂ ಮಾಡುವ ಉದ್ದೇಶದಿಂದ ಬಿಜೆಪಿ ಸೇರಿದ್ದೆ. ಇದೀಗ ಕ್ಷೇತ್ರದಲ್ಲಿ ನನ್ನ ಗೆಲುವಿಗೆ ಕಾಂಗ್ರೆಸ್ ಅನಿವಾರ್ಯ. ನಿಮ್ಮ ಬೆಂಬಲ, ಪ್ರೋತ್ಸಾಹ, ಸಹಕಾರಕ್ಕೆ ಆಭಾರಿ. ದಯವಿಟ್ಟು ಕ್ಷಮಿಸಿ, ನನ್ನ ಮುಂದಿನ ನಡೆಗೆ ಸಹಕರಿಸಿ ಎಂದು ಮನವಿ ಮಾಡಿದ್ದಾರೆ.
ನಾರಾಯಣಗೌಡರ ಮಾತಿಗೆ ಪ್ರತಿಕ್ರಿಯಿಸದೇ ಬಿ.ಎಸ್.ಯಡಿಯೂರಪ್ಪ ಮೌನಕ್ಕೆ ಜಾರಿದ್ದಾರೆ.





