ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಪಕ್ಷ ಘೋಷಿಸಿರುವ ಅಧಿಕೃತ ಅಭ್ಯರ್ಥಿಗಳ ವಿರುದ್ದ ಯಾರೇ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವವರನ್ನು ಪಕ್ಷದಿಂದ ಉಚ್ಛಾಟಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಪಕ್ಷವು ರಾಜ್ಯಾದ್ಯಂತ 20 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಮತ್ತು ಉಭಯ ಸದಸ್ಯ ಕ್ಷೇತ್ರಗಳಲ್ಲಿ ಒಬ್ಬರೇ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂದು ತಿಳಿಸಿದ್ದಾರೆ.

ಪಕ್ಷದಲ್ಲಿ ಯಾವುದೇ ಬಣಗಳಿಲ್ಲ ಇರುವುದು ಒಂದೇ ಬಣ ಅದು ಕಾಂಗ್ರೆಸ್ ಬಣ ಎಂದು ಪುನರುಚ್ಚರಿಸಿದ್ದಾರೆ. ಬಿಜೆಪಿ ನಾಯಕರಿಗೆ ಸರಿಯಾಗಿ ನಿದ್ದೆ ಬರದ ಕಾರಣ ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಗುತ್ತಿಗೆದಾರರು ಪ್ರಧಾನಿ ನರೇಂದ್ರ ಮೋದಿಗೆ ಬರೆದಿರುವ ಪತ್ರದಲ್ಲಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ನಮ್ಮ ಅಭ್ಯರ್ಥಿಗಳು ವಿಧಾನಪರಿಷತ್‌ಗೆ ನಾಮಪತ್ರ ಸಲ್ಲಿಸಿದ ನಂತರ ಕಾಂಗ್ರೆಸ್‌ನ ನಿಯೋಗ ರಾಜ್ಯಪಾಲರನ್ನು ಬೇಟಿ ಮಾಡಿ ಈ ಬಗ್ಗೆ ದೂರು ಸಲ್ಲಿಸಲಿದ್ದೇವೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ದೇಶದಲ್ಲಿರುವ ಅತ್ಯಂತ ಭ್ರಷ್ಟ ಸರ್ಕಾರ ಎಂದು ಆರೋಪಿಸಿದ್ದಾರೆ. ಮಳೆಯಿಂದ ಹಾನಿಗೀಡಾದವರಿಗೆ ಸರ್ಕಾರ ಈ ಕೂಡಲೇ ಪರಿಹಾರವನ್ನ ನೀಡಬೇಕು ಹಾಗು ದುರಸ್ತಿ ಕಾರ್ಯಕ್ಕೆ ತಕ್ಷಣವೇ ಹಣ ಬಿಡುಹಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.











