ಮೇ 1 ರಿಂದ ಲಸಿಕೆ ಅಭಿಯಾನ ಘೋಷಿಸಿದ ಮಾತಿನ ಶೂರ ಮೋದಿ ಈಗ ಎಲ್ಲಿದ್ದಾರೆ? ಸಿದ್ದರಾಮಯ್ಯ

ಟಿವಿಯಲ್ಲಿ ಕಾಣಿಸಿಕೊಂಡು ವೀರಾವೇಶದಿಂದ 18ರಿಂದ 45 ವಯಸ್ಸಿನವರಿಗೆ ಮೇ ಒಂದರಿಂದ ಲಸಿಕೆಯ ಘೋಷಣೆ ‌ಮಾಡಿದವರು‌ ಪ್ರಧಾನಿ ನರೇಂದ್ರ ಮೋದಿ ಈಗ ರಾಜ್ಯದ ಬಿಜೆಪಿ ಸರ್ಕಾರ ಲಸಿಕೆಯನ್ನು ಮುಂದೂಡಿದೆ. ಮಾತಿನ ಶೂರ ಮೋದಿಯವರು ಎಲ್ಲಿದ್ದಾರೆ ಈಗ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದ್ದಾರೆ.

18 ರಿಂದ 25 ವರ್ಷ ವಯಸ್ಸಿನವರಿಗೆ ಲಸಿಕೆ ನೀಡಲು ರಾಜ್ಯ  ಬಿಜೆಪಿ ಸರ್ಕಾರ ಸಿದ್ಧತೆ ಮಾಡಿಕೊಂಡಿಲ್ಲ ಎಂದು ಪ್ರಧಾನಿಯವರಿಗೆ ಗೊತ್ತಿರಲಿಲ್ಲವೇ? ಮುಖ್ಯಮಂತ್ರಿಗಳ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿಲ್ಲವೇ? ಮಾತು ತಪ್ಪಿದ ಪ್ರಧಾನಿ ನರೇಂದ್ರ ಮೋದಿ ಟಿವಿಯಲ್ಲಿ‌ ಕಾಣಿಸಿಕೊಂಡು ನಿಜ‌ಸಂಗತಿ ತಿಳಿಸಿ ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಲಸಿಕೆ ಪಡೆದುಕೊಳ್ಳಲು ಆನ್‌ಲೈನ್ ಮೂಲಕ ಜನರು ಹೆಸರನ್ನು ನೋಂದಣಿ ಮಾಡಬೇಕು. ಗ್ರಾಮೀಣ ಭಾಗದ ಜನರಿಗೆ ಈ ಆನ್‌ಲೈನ್ ನೋಂದಣಿ ಕಷ್ಟದ ಕೆಲಸ, ಹೀಗಾಗಿ ಕರೋನಾ ಲಸಿಕೆ ನೀಡುವುದನ್ನು ಪೋಲಿಯೋ ಲಸಿಕೆ ಮಾದರಿಯಲ್ಲೆ ಒಂದು ಅಭಿಯಾನವಾಗಿ ರೂಪಿಸಿ, ಜನರ ಬಳಿಗೆ ಹೋಗಿ ಲಸಿಕೆ ನೀಡಬೇಕು. ಲಸಿಕೆ ಪಡೆದವರಿಗೆ ಕರೋನಾ ಸೋಂಕು ತಗುಲುವ ಸಾಧ್ಯತೆ ತುಂಬಾ ಕಡಿಮೆ ಇದೆ. ಹೀಗಾಗಿ ರಾಜ್ಯದಲ್ಲಿರುವ 18 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ಎಲ್ಲರಿಗೂ ಶೀಘ್ರವಾಗಿ ಲಸಿಕೆ ಸಿಗುವಂತೆ ಮಾಡಲು ಬಿಜೆಪಿ ಸರ್ಕಾರ ಗಂಭೀರ ಪ್ರಯತ್ನ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಸರ್ಕಾರದ ಮುಖ್ಯಕಾರ್ಯದರ್ಶಿಯವರ ಜೊತೆ ಲಸಿಕೆ ವಿಚಾರವಾಗಿ ಚರ್ಚಿಸಿದ್ದೇನೆ. ಆರುವರೆ ಕೋಟಿ ಲಸಿಕೆಯ ಅಗತ್ಯವಿದೆ ಎಂದಿದ್ದಾರೆ. ನನ್ನ ಪ್ರಕಾರ ಈ ತಿಂಗಳ ಅಂತ್ಯದ ಒಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವುದನ್ನು ಪ್ರಾರಂಭಿಸಲು ಸಾಧ್ಯವಾಗದು. ಬೇಗ ಸಿಕ್ಕಿದ್ದರೆ ಸೋಂಕು ಇನ್ನಷ್ಟು ಕಡಿಮೆಯಾಗುತ್ತಿತ್ತು.  ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಲಸಿಕೆ ತಯಾರಿಕೆ ಸಂಬಂಧ 162 ಯುನಿಟ್ ಗಳಿಗೆ ಕೇಂದ್ರ ಸರ್ಕಾರ ಟೆಂಡರ್ ಕರೆದಿತ್ತು, ಈ ಪೈಕಿ 30 ಯುನಿಟ್ ಗಳಷ್ಟೇ ಕಾರ್ಯಾರಂಭ ಮಾಡಿವೆ. ದೇಶದಲ್ಲಿ ಲಸಿಕೆಯ ಅಭಾವ ಉಂಟಾಗಲು ಇದೇ ಮುಖ್ಯ ಕಾರಣ.  ಒಟ್ಟಿನಲ್ಲಿ ಕೇಂದ್ರದ  ಬಿಜೆಪಿ  ನಾಯಕರ ತಾತ್ಸಾರ ಧೋರಣೆಗೆ ಜನ ಜೀವ ತೆರುವಂತಾಗಿದೆ ಎಂದು ಅವರು ಹೇಳಿದ್ದಾರೆ.

45 ವರ್ಷ ಮೇಲ್ಪಟ್ಟವರಿಗೆ ನೀಡುವ ಲಸಿಕೆಗಷ್ಟೇ ಕೇಂದ್ರ ಸರ್ಕಾರ ಹಣ ಕೊಡುವುದು, ಅದಕ್ಕಿಂತ ಕೆಳಗಿನ ವಯೋಮಾನದ ಜನರಿಗೆ ನೀಡುವ ಲಸಿಕೆಗೆ ರಾಜ್ಯಗಳೇ ಹಣ ಹಾಕಬೇಕು. ಸದ್ಯದ ಪರಿಸ್ಥಿತಿಯಲ್ಲಿ ಲಸಿಕೆ ಪಡೆಯುವುದೊಂದೆ ಸೋಂಕು ತಡೆಗಟ್ಟಲು ಇರುವ ದಾರಿ, ಹೀಗಾಗಿ ರಾಜ್ಯ ಸರ್ಕಾರ ವಿಳಂಬ ಮಾಡದೆ ಎಲ್ಲರಿಗೂ ಲಸಿಕೆ ನೀಡಬೇಕು.

ಈ ವರೆಗೆ 45 ವರ್ಷ ಮೇಲ್ಪಟ್ಟ ಶೇ.25 ಜನರಿಗಷ್ಟೇ ಕರೋನಾ ಲಸಿಕೆ ನೀಡಲಾಗಿದೆ. ನಮ್ಮಲ್ಲೇ ಲಸಿಕೆಯ ಅಗತ್ಯತೆ ಹೆಚ್ಚಿರುವಾಗ ಪ್ರಧಾನಿ  ನರೇಂದ್ರ ಮೋದಿ ಅವರು ವಿದೇಶಗಳಿಗೆ 6 ಕೋಟಿ ಲಸಿಕೆ ನೀಡಿ ಭಾರತೀಯರು ಲಸಿಕೆಗಾಗಿ ಪರದಾಡುವಂತೆ ಮಾಡಿದ್ದಾರೆ. ಸೋಂಕು ಹರಡಲು ಇದೂ ಒಂದು ಕಾರಣ ಎಂದು ಅವರು ಅಭಿಪ್ರಾಯಿಸಿದ್ದಾರೆ.

ನಿತ್ಯ ಕರೋನಾ ಸೋಂಕು ಮಿತಿಮೀರಿ ಏರಿಕೆಯಾಗುತ್ತಿದ್ದು, ಇದನ್ನು ತಡೆಗಟ್ಟುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಬಿಜೆಪಿ ನಾಯಕರು ಕರೋನಾ ಸೋಂಕು ತಡೆಗಟ್ಟುವ ಪ್ರಾಮಾಣಿಕ ಪ್ರಯತ್ನ ಮಾಡಲಿ, ಇಲ್ಲವೇ ಅಧಿಕಾರ ಬಿಟ್ಟು ತೊಲಗಲಿ. ಸರ್ಕಾರದ ಅದಕ್ಷತೆ ಹಾಗೂ ದುರಾಡಳಿತಕ್ಕೆ ಅಮಾಯಕ ಜನರು ಬಲಿಯಾಗುವುದು ಬೇಡ. ರಾಜ್ಯ ಕಾಂಗ್ರೆಸ್ ಪಕ್ಷವು ಬಡರೋಗಿಗಳಿಗಾಗಿ 10 ಆಂಬುಲೆನ್ಸ್ ಗಳನ್ನು ವ್ಯವಸ್ಥೆಗೊಳಿಸಿ ಅವುಗಳ ಮೂಲಕ ಉಚಿತ ಸೇವೆ ನೀಡುತ್ತಿದೆ ಹಾಗೂ ಕರೋನಾ ಸಹಾಯವಾಣಿಯನ್ನು ತೆರೆದು ಸಂಕಷ್ಟದಲ್ಲಿರುವವರಿಗೆ ಅಗತ್ಯ ನೆರವು ನೀಡುತ್ತಿದೆ. ನಮ್ಮ ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರು ಇಂಥಾ ಸಂಕಷ್ಟದ ಸಮಯದಲ್ಲಿ ಜನರ ಜೊತೆ ನಿಂತು, ನೆರವಾಗಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದ್ದಾರೆ.

Related posts

Latest posts

ಬ್ಲಾಕ್ ಫಂಗಸ್: ಅಧಿಕೃತ ರೋಗಗಳ ಪಟ್ಟಿಯಲಿ ಸೇರಿಸಿ, ಉಚಿತ ಚಿಕಿತ್ಸೆ ಕೊಡಿ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

ಬ್ಲಾಕ್ ಫಂಗಸ್ ಕಾಯಿಲೆಯನ್ನು ಅಧಿಕೃತ ರೋಗಗಳ ಪಟ್ಟಿಯಲಿ ಸೇರಿಸಿ ಸೂಕ್ತ ಅಧಿಸೂಚನೆ ಹೊರಡಿಸಿ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೋವಿಡ್ ನಿಂದಾಗಿ ಸಾವು...

ಚುನಾವಣಾ ಬಾಂಡ್ ಮಾರಾಟ 16 ಪಟ್ಟು ಹೆಚ್ಚಳ: ಲಾಭವಾಗಿದ್ದು ಯಾರಿಗೆ ಎಂಬ ಪ್ರಶ್ನೆಗಿಲ್ಲ ಉತ್ತರ

ನಾಲ್ಕು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಚುನಾವಣೆಗಳು ಮುಗಿದು ಫಲಿತಾಂಶವೂ ಪ್ರಕಟಗೊಳ್ಳುವ ಮೂಲಕ 2021ರ ಚುನಾವಣಾ ಬಾಂಡ್ ವಿಧಾನಸಭೆ ಚುನಾವಣೆಗೆ ತೆರೆ ಬಿದ್ದಿದೆ. ಆದರೆ ಆ ಚುನಾವಣೆಗಳ ವೇಳೆ ವಿವಿಧ ಪಕ್ಷಗಳಿಗೆ ಮಾರಾಟವಾಗುವ...

ನಾರದಾ ಲಂಚ ಪ್ರಕರಣ- ಟಿಎಂಸಿ ಶಾಸಕ, ಸಚಿವರ ಬಂಧನ ವಿರೋಧಿಸಿ ಸಿಬಿಐ ಕಚೇರಿ ಮುಂದೆ ಟಿಎಂಸಿ ಬೆಂಬಲಿಗರಿಂದ ಪ್ರತಿಭಟನೆ

ನಾರದಾ ಲಂಚಪ್ರಕರಣದ ಆರೋಪದಡಿ ತೃಣಮೂಲ ಕಾಂಗ್ರೆಸ್ ಶಾಸಕರಾದ ಫಿರ್ಹಾದ್ ಹಕೀಮ್, ಸುಬ್ರತಾ ಮುಖರ್ಜಿ, ಮದನ್ ಮಿತ್ರ ಮತ್ತು ಮಾಜಿ ಸಚಿವ, ಕೋಲ್ಕತಾ ಮೇಯರ್ ಶೋವನ್ ಚಟರ್ಜಿಯನ್ನು ಕೇಂದ್ರ ತನಿಖಾ ದಳ (ಸಿಬಿಐ) ವು...