ರಾಜ್ಯಾದ್ಯಂತ ಸುರಿದ ಭಾರಿ ಮಳೆಯಿಂದ ಅಪಾರ ಪ್ರಮಾಣದ ಬೆಳೆನಷ್ಟವಾಗಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಬಿರುಗಾಳಿ ಸಹಿತ ಮಳೆ ಆರ್ಭಟದಿಂದ ಮರಗಳು ನೆಲಕ್ಕುರುಳಿವೆ. ಧಾರಾಕಾರ ಮಳೆಯಿಂದ ಪಟ್ಟಣದ ಎಲ್ಲ ರಸ್ತೆಗಳು ಜಲಾವೃತವಾಗಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿ, ಜನ ಜೀವನ ಅಸ್ತವ್ಯಸ್ತವಾಗಿತ್ತು. ಅತ್ತ ಧಾರವಾಡದಲ್ಲೂ ಭರ್ಜರಿ ಮಳೆಯಾಗಿದೆ.



ಧಾರವಾಡನಗರ ಸೇರಿ ಗ್ರಾಮೀಣ ಭಾಗದಲ್ಲೂ ಮಳೆ ಅಬ್ಬರ ಜೋರಾಗಿದೆ. ಜಿಲ್ಲೆಯ ಅಣ್ಣಿಗೇರಿ ಪಟ್ಟಣದಲ್ಲಿ ಬೃಹತ್ ಮರವೊಂದು ಧರೆಗೆ ಉರುಳಿದ್ದು, ಮರ ಉರುಳುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಇನ್ನು ಗದಗ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದ ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯಲ್ಲಿ ಕಟಾವಿಗೆ ಬಂದಿದ್ದ ಭತ್ತದ ಬೆಳೆ ನೆಲಕ್ಕೆ ಭಾಗಿದ್ದು ರೈತರಿಗೆ ಲಕ್ಷಾಂತರ ರೂ. ಮೌಲ್ಯದ ಬೆಳೆ ನೀರುಪಾಲಾಗಿದೆ.



ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬತಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ವರುಣ ಆರ್ಭಕ್ಕೆ ಹತ್ತಾರು ಎಕರೆಯ ಬಾಳೆ ಬೆಳೆ ಧಾರಾಶಾಹಿಯಾಗಿದೆ. ಗುಂಡ್ಲುಪೇಟೆ ತಾಲೂಕಿ ಕೊಡಸೋಗೆ ಗ್ರಾಮದಲ್ಲಿ ರೈತರು ಬೆಳೆದಿದ್ದ ಬಾಳೆ ನೆಲಕ್ಕೆ ಉರುಳಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಷ್ಟವಾಗಿ, ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ.