ಬಂಗಾಳಕೊಲ್ಲಿಯಲ್ಲಿ ವಾಯುಭಾರತ ಕುಸಿತದಿಂದ ಉಂಟಾದ ಫೆಂಗಲ್ ಚಂಡಮಾರುತ ತಮಿಳುನಾಡಿಗೆ ಎಂಟ್ರಿ ಕೊಟ್ಟಿದೆ. ಕಳೆದ 2 ದಿನಗಳಿಂದ ನೆರೆ ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದ್ದ ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಕೂಡಾ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಫೆಂಗಲ್ ಚಂಡಮಾರುತದಿಂದ ತಮಿಳುನಾಡಿನಲ್ಲಿ ಮಾತ್ರವಲ್ಲ ಕರ್ನಾಟಕದಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಕಳೆದ 2 ದಿನಗಳಿಂದ ಚಳಿ ಹೆಚ್ಚಾಗಿದ್ದು ಮುಂದಿನ 3 ದಿನಗಳ ಕಾಲ ಬೆಂಗಳೂರು ಸೇರಿದಂತೆ ಮೈಸೂರು , ಮಂಡ್ಯ , ರಾಮನಗರ , ಕೋಲಾರ ಚಾಮರಾಜನಗರ ಹಾಸನ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಚೆನ್ನೈ ನಲ್ಲಿ ಮಳೆ..!ಚೆನ್ನೈ ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿ ಮಂಗಳವಾರ ಬೆಳಗ್ಗೆಯಿಂದಲೇ ಭಾರೀ ಮಳೆಯಾಗುತ್ತಿದೆ. ಧಾರಾಕಾರ ಮಳೆಯಿಂದಾಗಿ ಹಲವೆಡೆ ರಸ್ತೆಗಳು ಜಲಾವೃತವಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲ್ಪಟ್ಟು ಸೇರಿದಂತೆ ನೆರೆಯ ಜಿಲ್ಲೆಗಳಲ್ಲಿ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚೆನ್ನೈ, ನಾಗಪಟ್ಟಣಂ, ಮೈಲಾಡುತುರೈ ಮತ್ತು ತಿರುವಾರೂರ್ ಸೇರಿದಂತೆ 9 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.