ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ನಗರದ ಟೌನ್ ಹಾಲ್ ಎದುರು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದಾರೆ.
ಜಿಲ್ಲಡಳಿತದ ವತಿಯಿಂದ ಪಾರಂಪರಿಕ ಸೈಕಲ್ ಸವಾರಿ, ರಾಜ್ಯಮಟ್ಟದ ದಸರಾ ಕ್ರೀಡಾಕೂಟ, ದಸರಾ ಯೋಗಾಸನ ಸ್ಪರ್ಧೆಗೆ ಚಾಲನೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ್ದಾರೆ.
ನಾಡಹಬ್ಬ ದಸರಾ ಅಂಗವಾಗಿ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯವರು ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳ ವೀಕ್ಷಣೆಗಾಗಿ ಸೈಕಲ್ ಸವಾರಿಯನ್ನು ಏರ್ಪಡಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಯುವಕರು,ಹಿರಿಯರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ.
ತಾಯಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಕ್ರೀಡಾಜ್ಯೋತಿ ಬೆಳಗಿಸಲಾಯಿತು.ಒಲಂಪಿಕ್ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲ್ಲಿಕ್, ಕ್ರೀಡಾ ಸಚಿವರಾದ ನಾರಾಯಣಗೌಡ ಅವರು ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ ಎಂದರು.
ರಾಜ್ಯದ ನಾನಾ ಜಿಲ್ಲೆಗಳಿಂದ ಸುಮಾರು 4500 ಕ್ರೀಡಾಪಟುಗಳು ಆಗಮಿಸಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.
ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸುವ ಮಕ್ಕಳು ಯೋಗ ಪ್ರದರ್ಶನ ವೀಕ್ಷಿಸಿ ಮಾತನಾಡಿದ ಸಚಿವರು, ಯೋಗ ಕಲಿಕೆಗೆ ಈಗ ಹೆಚ್ಚು ಒತ್ತು ನೀಡಲಾಗುತ್ತಿದೆ. ಯೋಗವನ್ನು ಮಾನಸಿಕ ಮತ್ತು ದೈಹಿಕ ವಿಕಸನದ ಸಾಧನವಾಗಿ ಗುರುತಿಸಲಾಗಿದೆ ಎಂದರು.
ಯೋಗಾಭ್ಯಾಸ ಮಾಡುವುದರಿಂದ ಮನಸ್ಸು ಮತ್ತು ದೇಹ ಎರಡನ್ನು ಆರೋಗ್ಯವಾಗಿಟ್ಟುಕೊಳ್ಳಬಹುದು. ನಮ್ಮೆಲ್ಲರ ನೆಚ್ಚಿನ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ವಿಶ್ವ ಯೋಗದಿನಂದು ಮೈಸೂರಿಗೆ ಆಗಮಿಸುವ ಮೂಲಕ ಸಾಂಸ್ಕೃತಿಕ ನಗರಿಯ ಕೀರ್ತಿ ಮತ್ತಷ್ಟು ಹೆಚ್ಚಾಯಿತು ಎಂದರು.
ಈ ವೇಳೆ ಶಾಸಕರಾದ ನಾಗೇಂದ್ರ, ಸಂಸದರಾದ ಪ್ರತಾಪ್ ಸಿಂಹ, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೇ ಶ್ರೀನಿವಾಸ್, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷರಾದ ಅಪ್ಪಣ್ಣ, ದಸರಾ ಸಾಹಸ ಕ್ರೀಡಾ ಉಪಾಧ್ಯಕ್ಷರಾದ ಶಿವರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.