ಬೆಂಗಳೂರು: ಮನರೇಗಾ ವಿಚಾರವಾಗಿ ಬಹಿರಂಗ ಚರ್ಚೆ ಮಾಡುವ ವಿರೋಧ ಪಕ್ಷಗಳ ಪಂಥಾಹ್ವಾನವನ್ನು ನಾನು ಸ್ವೀಕರಿಸುವೆ. ಅವರು ಯಾವಾಗ ಬೇಕಾದರೂ ಯಾವುದೇ ವೇದಿಕೆಯಲ್ಲಾದರೂ ಚರ್ಚೆ ಬರಲಿ, ನಾನು ಸಿದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್(DCM D.K. Shivakumar )ಹೇಳಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಅದನ್ನು ತೀರ್ಮಾನ ಮಾಡುತ್ತೇವೆ. ವಿರೋಧ ಪಕ್ಷದವರು ಚರ್ಚೆಗೆ ಸಿದ್ಧ ಎಂದಿದ್ದಾರೆ. ಅವರು ಯಾವುದೇ ಮಾಧ್ಯಮ ವೇದಿಕೆಯಲ್ಲಾದರೂ, ಯಾವಾಗ ಕರೆದರೂ ನಾನು ಚರ್ಚೆಗೆ ಬರುತ್ತೇನೆ. ಕುಮಾರಸ್ವಾಮಿ ಅವರು ಚರ್ಚೆಗೆ ಬಂದರೆ ನಾನು ಅವರನ್ನು ಸ್ವಾಗತಿಸುತ್ತೇನೆ. ಮೊದಲು ಅವರು ಬಂದರೆ ಬಹಳ ಒಳ್ಳೆಯದು. ಬಿಜೆಪಿ ರಾಜ್ಯ ಅಧ್ಯಕ್ಷರು, ವಿರೋಧ ಪಕ್ಷದ ನಾಯಕರು, ಕುಮಾರಸ್ವಾಮಿ ಯಾರು ಬೇಕಾದರೂ ಬರಲಿ. ಅವರ ಪಂಥಾಹ್ವಾನ ಸ್ವೀಕಾರ ಮಾಡಿದ್ದೇನೆ. ಸಾರ್ವಜನಿಕ ವೇದಿಕೆ, ಅಧಿವೇಶನ ಅಥವಾ ಮಾಧ್ಯಮ ವೇದಿಕೆಯಾದರೂ ಸರಿ. ಚರ್ಚೆಗೆ ನಾನು ಸಿದ್ಧ ಎಂದರು.

ಮಾಧ್ಯಮಗಳ ಮುಂದೆ ಡೈಲಾಗ್ ಹೊಡೆಯುವ ಕುಮಾರಸ್ವಾಮಿ ಮಾತು ಗಂಭೀರವಲ್ಲ
ಸಿಎಂ ಸಿದ್ದರಾಮಯ್ಯ ಬಗ್ಗೆ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಅವರ ಮಾತನ್ನು ನಾವು ಗಂಭೀರವಾಗಿ ಪರಿಗಣಿಸುವುದಿಲ್ಲ. ಮೊದಲಿನಿಂದ ಮಾಧ್ಯಮಗಳ ಮುಂದೆ ಡೈಲಾಗ್ ಹೊಡೆದು ಹೋಗುವುದನ್ನು ನೋಡಿದ್ದೇವೆ. ಅವರ ಟೀಕೆಗೆ ಸಿದ್ದರಾಮಯ್ಯ ಅವರು ತಿರುಗೇಟು ನೀಡುತ್ತಾರೆ. ಆ ಸಾಮರ್ಥ್ಯ ಅವರಿಗಿದೆ. ಬಹಿರಂಗ ಚರ್ಚೆಗೆ ಯಾವಾಗ ಸಮಯ ನಿಗದಿ ಮಾಡುತ್ತೀರಾ ಹೇಳಿ. ಇವತ್ತು ಸಂಜೆಯಿಂದಲೇ ಚರ್ಚೆಗೆ ಸಿದ್ಧ. ನರೇಗಾ ವಿಚಾರದಲ್ಲಿ ನನಗೆ ಚರ್ಚೆ ಮಾಡಲು ಯಾವ ತಯಾರಿಯೂ ಬೇಕಾಗಿಲ್ಲ. ಎಲ್ಲಾ ಮಾಹಿತಿಗಳು ನನ್ನ ಬೆರಳ ತುದಿಯಲ್ಲಿವೆ. ಬೇರೆ ಎಲ್ಲೂ ಹೋಗಬೇಕಿಲ್ಲ ಎಂದು ಹೇಳಿದರು.

ನರೇಗಾ ಯೋಜನೆಯಲ್ಲಿ ನಮ್ಮ ಕನಕಪುರ ತಾಲೂಕಿನಲ್ಲಿ ಎಷ್ಟು ಕೆಲಸ ಆಗಿದೆ ಎಂದು ನಮಗೆ ಗೊತ್ತಿದೆ. ನರೇಗಾ ಯೋಜನೆ ಜಾರಿಯಲ್ಲಿ ಕನಕಪುರ ನಂಬರ್ 1 ಎಂದು ಬಿಜೆಪಿಯ ಕೇಂದ್ರ ಸರ್ಕಾರ ಪ್ರಶಸ್ತಿ ನೀಡಿದೆ. ಈ ವಿಚಾರ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿಜಯೇಂದ್ರ ಅವರಿಗೆ ಗೊತ್ತಿದೆಯೋ ಇಲ್ಲವೋ. ನಮ್ಮ ತಾಲ್ಲೂಕಿನಲ್ಲಿ ಅವ್ಯವಹಾರ ಆಗಿದೆಯೇ ಇಲ್ಲವೇ ಎಂದು ಕೇಂದ್ರ ಸರ್ಕಾರ ಹತ್ತು ತಂಡ ಕಳುಹಿಸಿ ತನಿಖೆ ಮಾಡಿಸಿದೆ ಎಂದರು.












