ಬೆಂಗಳೂರು: ಕ್ರಷರ್ ಕೆಲಸದ ವೇಳೆ ಬಂಡೆ ಕುಸಿದು ಏಳು ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರೆಕರೆ ಮಾದಪಟ್ಟಣ ಗ್ರಾಮದಲ್ಲಿ ನಡೆದಿದೆ. ಸುಮಾರು 15ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಈ ವೇಳೆ ಕೆಲಸ ಮಾಡುತ್ತಿದ್ದು, ದುರಂತದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದು, ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದ ಕ್ರಷರ್ ಕ್ವಾರಿಯಲ್ಲಿ ಬಂಡೆ ಕುಸಿದು ಏಳು ಮಂದಿ ಕಾರ್ಮಿಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಅತ್ಯಂತ ಆಘಾತಕಾರಿ ಮತ್ತು ನೋವಿನ ಸಂಗತಿಯಾಗಿದೆ. ಮೃತರಾದ ಕಾರ್ಮಿಕರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಭಗವಂತನು ಅಗಲಿದ ಆತ್ಮಗಳಿಗೆ ಚಿರಶಾಂತಿ ನೀಡಲಿ, ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಹಾಗೂ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಈ ದುರಂತವು ಕ್ವಾರಿಗಳಲ್ಲಿ ಸುರಕ್ಷತಾ ನಿಯಮಗಳ ಅನುಷ್ಠಾನ ಹಾಗೂ ಸರ್ಕಾರದ ಮೇಲ್ವಿಚಾರಣೆಯ ವೈಫಲ್ಯವನ್ನು ಪ್ರಶ್ನಿಸುವಂತಿದೆ. ಸಂಬಂಧಪಟ್ಟ ಇಲಾಖೆಗಳ ನಿರ್ಲಕ್ಷ್ಯ, ಸುರಕ್ಷತಾ ನಿಯಮಗಳ ಉಲ್ಲಂಘನೆ ಅಥವಾ ಅಧಿಕಾರಿಗಳ ಲೋಪದಿಂದ ಈ ಅನಾಹುತ ಸಂಭವಿಸಿದ್ದರೆ, ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಜರುಗಿಸಬೇಕು.

ಮೃತರ ಕುಟುಂಬಗಳಿಗೆ ಸರ್ಕಾರ ತಕ್ಷಣವೇ ಸಮರ್ಪಕ ಪರಿಹಾರ ಘೋಷಿಸಬೇಕು, ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಹಾಗೂ ರಾಜ್ಯದ ಎಲ್ಲಾ ಕ್ವಾರಿಗಳಲ್ಲಿ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಇಂತಹ ದುರಂತಗಳು ಮತ್ತೆ ಮರುಕಳಿಸದಂತೆ ಶಾಶ್ವತ ಕ್ರಮಗಳನ್ನು ಕೈಗೊಳ್ಳಬೇಕು. ಕಾರ್ಮಿಕರ ಸುರಕ್ಷತೆ ವಿಚಾರದಲ್ಲಿ ಯಾವುದೇ ರಾಜಿ ಇರಬಾರದು ಎಂದು ಆಗ್ರಹಿಸಿದ್ದಾರೆ.






