ಬೆಂಗಳೂರು:”ನಮ್ಮ ದೇಶವನ್ನು ಯಾವ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಬೇಕು.ಮುಂದಿನ ದಿನಗಳಲ್ಲಿ ಪಕ್ಷದ ಹೋರಾಟದ ಬಗ್ಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಹಾಗೂ ಮುಖಂಡರ ಸಭೆಯನ್ನು ಶನಿವಾರ ನಡೆಸಿದರು.
ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಶಿವಕುಮಾರ್ ಅವರು, “ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬೆಳಗಾವಿ ಅಧಿವೇಶನಕ್ಕೆ ಶತಮಾನೋತ್ಸವ ಹಿನ್ನೆಲೆಯಲ್ಲಿ ಇದೇ ತಿಂಗಳು 26 ಹಾಗೂ 27ರಂದು ಬೆಳಗಾವಿಯಲ್ಲಿ ನಡೆಯಲಿರುವ ಐತಿಹಾಸಿಕ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳ ಕುರಿತು ಮುಖ್ಯಮಂತ್ರಿಗಳು ಇಂದು ಸಭೆ ನಡೆಸಿದ್ದಾರೆ” ಎಂದು ತಿಳಿಸಿದರು.
“ಸುವರ್ಣಸೌಧದ ಆವರಣದಲ್ಲಿ ಮಹಾತ್ಮಾ ಗಾಂಧಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಎಲ್ಲಾ ಶಾಸಕರನ್ನು ಆಹ್ವಾನ ನೀಡಲಾಗುವುದು” ಎಂದರು.
“26ರಂದು ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು, ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರುಗಳು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಎಲ್ಲಾ ಪದಾಧಿಕಾರಿಗಳು, 150 ಸಂಸದರು ಈ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ” ಎಂದು ಮಾಹಿತಿ ನೀಡಿದರು.
“27ರಂದು ಬೆಳಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಬೃಹತ್ ಸಾರ್ವಜನಿಕ ಸಮಾವೇಶ ನಡೆಯಲಿದ್ದು, ಅನೇಕ ರಾಷ್ಟ್ರೀಯ ನಾಯಕರು ಮಾತನಾಡಲಿದ್ದಾರೆ. ಈ ಸಮಾವೇಶಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಕಾರ್ಯಕರ್ತರು, ಮುಖಂಡರು ಸ್ವಇಚ್ಛೆಯಿಂದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ”ಎಂದು ಹೇಳಿದರು.
“ಇದಕ್ಕೂ ಮುನ್ನ 27ರಂದು ಬೆಳಗ್ಗೆ ಸುವರ್ಣಸೌಧದಲ್ಲಿ ಮಹಾತ್ಮಾ ಗಾಂಧೀಜಿ ಅವರ ಪ್ರತಿಮೆ ಅನಾವರಣ ಮಾಡಲಾಗುವುದು. ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಈ ಪ್ರತಿಮೆ ಅನಾವರಣ ಮಾಡಲಿದ್ದಾರೆ. ಉಭಯ ಸದನಗಳ ಸ್ಪೀಕರ್ ಹಾಗೂ ಸಭಾಪತಿಗಳು, ವಿರೋಧ ಪಕ್ಷಗಳ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೇವಲ ಶಾಸಕರು, ಸಂಸದರು ಹಾಗೂ ಅತಿಥಿಗಳಿಗೆ ಮಾತ್ರ ಅವಕಾಶವಿದ್ದು, ಭದ್ರತೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅವಕಾಶವಿಲ್ಲ” ಎಂದು ತಿಳಿಸಿದರು.
ಸಮಾವೇಶಕ್ಕೆ ಎಷ್ಟು ಜನ ಸೇರುವ ನಿರೀಕ್ಷೆಯಿದೆ ಎಂದು ಕೇಳಿದಾಗ, “ರಾಜ್ಯದ ಎಲ್ಲಾ ಭಾಗಗಳಿಂದ ಕಾರ್ಯಕರ್ತರು ಆಗಮಿಸುವಂತೆ ಆಹ್ವಾನ ನೀಡಿದ್ದು, ಎಷ್ಟು ಜನ ಸೇರುತ್ತಾರೆ ಎಂದು ಕಾದುನೋಡಬೇಕು” ಎಂದರು.ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗುವುದೇ ಎಂದು ಕೇಳಿದಾಗ, “ಈ ವಿಚಾರವಾಗಿ ಎಐಸಿಸಿ ತೀರ್ಮಾನ ಮಾಡಲಿದೆ.ಈ ಸಭೆಯಲ್ಲಿ ಕೆಲವು ಅಜೆಂಡಾಗಳಿವೆ.
1924ರಲ್ಲಿ ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾದಾಗ ಕರ್ನಾಟಕದವರೇ ಆದ ಗಂಗಾಧರ ದೇಶಪಾಂಡೆ ಹಾಗೂ ಜವಹಾರಲಾಲ್ ನೆಹರು ಅವರು ಪ್ರಧಾನ ಕಾರ್ಯದರ್ಶಿಗಳಾಗಿದ್ದರು. ಆ ಅಧಿವೇಶನದಲ್ಲಿ ಹಲವು ತೀರ್ಮಾನ ಮಾಡಲಾಗಿತ್ತು. ಇಂದಿನ ಕಾಲಘಟ್ಟಕ್ಕೆ ಅನುಗುಣವಾಗಿ ಪಕ್ಷ ಅನೇಕ ತೀರ್ಮಾನ ಮಾಡಲಿದೆ”ಎಂದು ತಿಳಿಸಿದರು.
ಮಂಡ್ಯದಲ್ಲಿ ನೀಡಿದ ಮಾಧ್ಯಮ ಪ್ರತಿಕ್ರಿಯೆ:ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ 11ನೇ ದಿನದ ಕಾರ್ಯದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಎಸ್.ಎಂ ಕೃಷ್ಣ ಅವರ 11ನೇ ದಿನದ ಪುಣ್ಯತಿಥಿ ನಡೆಯುತ್ತಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ರಾಜ್ಯದಿಂದ ಜನ ಬಂದು ನಮನ ಸಲ್ಲಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
“ಸರ್ಕಾರಿ ಗೌರವಗಳೊಂದಿಗೆ ಕೃಷ್ಣ ಅವರ ಅಂತಿಮ ಸಂಸ್ಕಾರ ನಡೆಸಲಾಗಿದ್ದು, ಇದಕ್ಕೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ” ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿ. ರವಿ ಅವರು ಆಗಮಿಸುತ್ತಿರುವ ಹಿಳ್ಳೆಯಲ್ಲಿ ಕೆಲವು ಸಂಘಟನೆಗಳು ಗೋಬ್ಯಾಕ್ ರವಿ ಎಂಬ ಘೋಷಣೆ ಕೂಗಿರುವ ಬಗ್ಗೆ ಕೇಳಿದಾಗ, “ನನಗೆ ಆ ವಿಚಾರ ಗೊತ್ತಿಲ್ಲ. ಇದು ಜನ ಮತ್ತು ಅವರಿಗೆ ಬಿಟ್ಟ ವಿಚಾರ. ಸಮಾಜ ಮತ್ತು ಅವರಿಗೆ ಬಿಟ್ಟ ವಿಚಾರ” ಎಂದು ತಿಳಿಸಿದರು.