ಮೈಸೂರು: ಸೋಮವಾರ ಸಂಜೆ ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಕಾರಿನಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಹತ್ತಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ಕರ್ನಾಟಕದಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದೆ.

ಈ ಘಟನೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಚುನಾವಣೆ ವೇಳೆಯ ಬಾಂಬ್ ಬ್ಲಾಸ್ಟ್‌ಗಳ ಬಗ್ಗೆ ಕೇಂದ್ರ ಸರ್ಕಾರವೇ ಹೇಳಬೇಕು. ಕೇಂದ್ರವೇ ತನಿಖೆ ನಡೆಸಿ ಉತ್ತರಿಸಲಿ. ನೆನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು ಎಂದು ಮೈಸೂರಿನಲ್ಲಿ ಪತ್ರಕರ್ತರ ಪ್ರಶ್ನೆಗೆ ಸಿಎಂ ಉತ್ತರಿಸಿದರು.

ಇನ್ನು ಈ ಘಟನೆ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ , ದೆಹಲಿಯ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ಜನನಿಬಿಡ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಿ, ಜನರ ಸುರಕ್ಷತೆಗೆ ಆದ್ಯತೆ ನೀಡುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಯಾವುದೇ ತರನಾದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಕೂಡ ಪೊಲೀಸ್ ಇಲಾಖೆಯ ಜೊತೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.


