ಕಲಬುರಗಿ:ರಾಜ್ಯಪಾಲರ ಕುರಿತು ಕಾಂಗ್ರೆಸ್ ನಾಯಕರು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕರು ನಗರದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದು, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ನಾಯಕರು, ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ಬಳಿಕ ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿ ತನಕ ಪ್ರತಿಭಟನಾ ಜಾಥಾ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಸುಮಾರು 40 ನಿಮಿಷಗಳ ಕಾಲ ರಸ್ತೆಯಲ್ಲಿ ವಾಹನಗಳ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಮಾತನಾಡಿ, ತಪ್ಪು ಮಾಡಿರುವ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು, ಹಿಂದೆ ಯಡಿಯೂರಪ್ಪ ಅವರ ವಿರುದ್ಧ ಆರೋಪ ಕೇಳಿ ಬಂದಾಗ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಆಗ ವಿರೋಧ ಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು ಸರಿಯಾಗಿದೆ ಎಂದಿದ್ದರು. ಈಗ ಅಂಥದ್ದೆ ಸಂದರ್ಭದಲ್ಲಿ ರಾಜ್ಯಪಾಲರ ನಿರ್ಧಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟಿಸುತ್ತಿದೆ. ಇದಕ್ಕೆ ಏನು ಹೇಳುತ್ತೀರಿ ಸಿದ್ದರಾಮಯ್ಯ ಅವರೇ? ಎಂದು ಪ್ರಶ್ನಿಸಿದರು.