ಬೆಳಗಾವಿ: ಮಾಜಿ ಸಚಿವೆ ಹಾಗೂ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯಲ್ಲಿ ಬುಧವಾರ ಸಂಜೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟನೆ ವ್ಯಕ್ತಪಡಿಸಿದರು.

ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಅಡಿವೇಶ ಇಟಗಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಪಾಲ್ಗೊಂಡು, ಲಕ್ಷ್ಮೀ ಹೆಬ್ಬಾಳ್ಕರ್ ಪರ ಘೋಷಣೆಗಳನ್ನು ಕೂಗಿ ತಮ್ಮ ಬೆಂಬಲ ವ್ಯಕ್ತಪಡಿಸಿದರು. ಬಸವೇಶ್ವರ ವೃತ್ತದಿಂದ ಆರಂಭವಾದ ಪಂಜಿನ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳ ಮೂಲಕ ರಾಷ್ಟ್ರೀಯ ಹೆದ್ದಾರಿವರೆಗೆ ಸಾಗಿತು.ಬಳಿಕ ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿ ಸರ್ಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಇದರಿಂದ ವಾಹನ ಸಂಚಾರದಲ್ಲಿ ಕೆಲಕಾಲ ವ್ಯತ್ಯಯ ಉಂಟಾಯಿತು. ಸ್ಥಳಕ್ಕಾಗಮಿಸಿದ ಪೊಲೀಸರು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ರಸ್ತೆ ತಡೆ ತೆರವುಗೊಳಿಸಿದರು.

ಈ ವೇಳೆ ಮಾತನಾಡಿದ ಅಡಿವೇಶ ಇಟಗಿ, “ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹಲವು ವರ್ಷಗಳಿಂದ ಪಕ್ಷ ಸಂಘಟನೆ ಹಾಗೂ ಜನಸೇವೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅವರ ಅನುಭವ, ಆಡಳಿತ ಸಾಮರ್ಥ್ಯ ಮತ್ತು ಜನಪರ ಕಾರ್ಯಗಳನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಅವರಿಗೆ ಸೂಕ್ತ ಸ್ಥಾನ ನೀಡಬೇಕು” ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು, ಉತ್ತರ ಕರ್ನಾಟಕದ ಜನರ ಭಾವನೆಗಳಿಗೆ ಕಾಂಗ್ರೆಸ್ ಹೈಕಮಾಂಡ್ ಗೌರವ ನೀಡಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ನೀಡಿ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.ಈ ಪ್ರತಿಭಟನೆಯಲ್ಲಿ ಸಿದ್ದಪ್ಪ ಸಿಂಗಾಡಿ, ರಘು ಪಾಟೀಲ, ಮನ್ಸೂರ್ ಅಲಿ ಅತ್ತಾರ, ಅನಿಲ್ ಕರಲಿಂಗಣ್ಣವರ, ಸಿದ್ದಪ್ಪ ಚಾಪಗಾಂವಿ, ಅಡಿವೆಪ್ಪ ತೋಟಗಿ, ರವಿ ಗಾಣಗಿ, ಮುಷ್ಯಾಪ ಉಪ್ಪಾರ, ರಾಜು ಉಪ್ಪಾರ, ನೀಲಕಂಠ, ಆಂಜನೇಯ, ಗೌಸ್ ಜಾಲಿಕೊಪ್ಪ, ರಮೇಶ್ ವಾಲಿ, ರಶೀದ್ ಸಾಹೇದ್, ಬಸವರಾಜ್ ಇಟಗಿ, ಆನಂದ್ ಪಾಟೀಲ್, ಸುರೇಶ್ ಗೊಂಡ್ಲೂರು, ಚನ್ನಪ್ಪ ಹುದಲಿ, ನೀಲಕಂಠ ಪರವತಿ, ಬಸವರಾಜ್ ಯಾದವಾಡ, ಮಹೇಶ್ ಗುಂಡ್ಲೂರು ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.





