ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡರ ಮೇಲೆ ಅಸಮಾಧಾನಗೊಂಡಿರುವ ಜೆಡಿಎಸ್‌ನ ಐವರು ನಾಯಕರು ಪಕ್ಷದಿಂದ ಹೊರಬರುವುದಾಗಿ ಘೋಷಿಸಿದ್ದರು
ಮುಂಬರುವ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಿ ಆರಂಭಿಸಿರುವ ನಡುವೆಯೇ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಕ್ಕೊಂದು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ.
ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡರ ಮೇಲೆ ಅಸಮಾಧಾನಗೊಂಡಿರುವ ಜೆಡಿಎಸ್‌ನ ಐವರು ನಾಯಕರು ಪಕ್ಷದಿಂದ ಹೊರಬರುವುದಾಗಿ ಘೋಷಿಸಿದ್ದರು. ಈ ನಡುವೆ ರಾತ್ರೋರಾತ್ರಿ ನಡೆದ ಬೆಳವಣಿಗೆಯಲ್ಲಿ ಮಾಜಿ ಜಿಪಂ ಸದಸ್ಯ ಬೆಳವಾಡಿ ಶಿವಮೂರ್ತಿ, ಜೆಡಿಎಸ್ ಅಸಮಾಧಾನಿತರ ಬಣದಿಂದ ಹೊರಬಂದು ಶಾಸಕ ಜಿ.ಟಿ. ದೇವೇಗೌಡ ಅವರೊಂದಿಗೆ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದರು.
ಆದರೆ ತಮ್ಮ ನಿಲುವು ಬದಲಿಸದ ಉಳಿದ ನಾಲ್ವರು ಅಸಮಾಧಾನಿತ ಜೆಡಿಎಸ್ ಮುಖಂಡರು, ಕಾಂಗ್ರೆಸ್ ವಲಯದಲ್ಲಿ ಕಾಣಿಸಿಕೊಂಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಕೃಷ್ಣಕುಮಾರ್ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಜೆಡಿಎಸ್‌ನ ಅಸಮಾಧಾನಿತರಾದ ಬೀರಿಹುಂಡಿ ಬಸವಣ್ಣ, ಮಾವಿನಹಳ್ಳಿ ಸಿದ್ದೇಗೌಡ, ಮಾದೇಗೌಡ ಹಾಗೂ ಇತರರು ಭಾಗಿಯಾಗುವ ಮೂಲಕ ತಮ್ಮ ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಕೃಷ್ಣಕುಮಾರ್ ಹುಟ್ಟಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಈ ನಾಯಕರು ಬೃಹತ್ ಹೂವಿನ ಹಾರ ಹಾಕಿ, ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಆ ಮೂಲಕ ಶಾಸಕ ಜಿ.ಟಿ. ದೇವೇಗೌಡರಿಗೆ ಟಾಂಗ್ ಕೊಡುವ ಪ್ರಯತ್ನ ಮಾಡಿದ್ದಾರೆ.