ಬೆಂಗಳೂರು: ರಾಜ್ಯದಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆ ಹಾಗೂ ಮೆರವಣಿಗೆಗಳ ಸಂದರ್ಭದಲ್ಲಿ ಡಿಜೆ ಸಿಸ್ಟಂ ಬಳಕೆಯನ್ನು ಸರ್ಕಾರ ನಿಷೇಧಿಸಿದೆ. ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಆಯಾ ಜಿಲ್ಲಾಡಳಿತಗಳು ಈ ಸಂಬಂಧ ಆದೇಶ ಹೊರಡಿಸಿವೆ.ಆಗಸ್ಟ್ 25ರಿಂದ ಜಾರಿಗೆ ಬರುವಂತೆ ಆಗಸ್ಟ್ 28ರವರೆಗೆ ಡಿಜೆ ಸೌಂಡ್ ಸಿಸ್ಟಂ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಆಗಸ್ಟ್ 26ರಂದು ಈದ್ ಮಿಲಾದ್ ಆಚರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಲ್ಕು ದಿನಗಳ ಕಾಲ ಈ ನಿಷೇಧ ಜಾರಿಯಲ್ಲಿರಲಿದೆ.

ಈದ್ ಮಿಲಾದ್ ಮೆರವಣಿಗೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ವೇಳೆ ಡಿಜೆ ಸಿಸ್ಟಂನಿಂದ ಉಂಟಾಗುವ ಅತಿಯಾದ ಶಬ್ದದಿಂದ ಸಾರ್ವಜನಿಕರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಹಾಗೂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ತೊಂದರೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಶಿಫಾರಸಿನ ಮೇರೆಗೆ ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 35 ಮತ್ತು 36ರ ಅಡಿಯಲ್ಲಿ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.ನಿಷೇಧದ ಅವಧಿಯಲ್ಲಿ ಡಿಜೆ ಸಿಸ್ಟಂ ಬಳಕೆ ಮಾಡಿದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.






