ಜೆಡಿಎಸ್ ಕೇವಲ ಒಕ್ಕಲಿಗ, ಲಿಂಗಾಯತ ಸಮುದಾಯಕ್ಕೆ ಮಾತ್ರ ಆದ್ಯತೆ ನೀಡುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.
ಬಿಡದಿಯ ತೋಟದಲ್ಲಿ ನಡೆದಿರುವ ಜನತಾ ಪರ್ವ 1.O ಹಾಗೂ ಮಿಷನ್ 123 ಆರನೇ ದಿನದ ಕಾರ್ಯಾಗಾರದ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಡಿಕೆಶಿಗೆ ನೇರವಾಗಿ ಕೆಲ ಪ್ರಶ್ನೆಗಳನ್ನು ಕೇಳಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ನೀವು ಎಷ್ಟು ಸಮುದಾಯಗಳಿಗೆ ಗೌರವ ಕೊಟ್ಟಿದ್ದೀರಿ? ನಿಮ್ಮ ಪಕ್ಷದ ದಲಿತ ಸಮಾಜದ ನಾಯಕರನ್ನು ಚುನಾವಣೆಯಲ್ಲಿ ಸೋಲಿಸಿದವರು ಯಾರು? ಪಟ್ಟಿ ದೊಡ್ಡದಾಗಿದೆ, ಒಮ್ಮೆ ನೋಡಿಕೊಳ್ಳಿ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ಅಡ್ಡಿ ಬರುತ್ತಾರೆಂದು ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ಸೋಲಿಗೆ ಕಾರಣ ಯಾರು? ಧರ್ಮಸಿಂಗ್ ಅವರ ಸೋಲಿಗೆ ಕಾರಣ ಯಾರು? ಕೋಲಾರದಲ್ಲಿ ಕೆ.ಹೆಚ್. ಮುನಿಯಪ್ಪ ಅವರನ್ನು ಸೋಲಿಸಿದವರು ಯಾರು? ಬಿಜೆಪಿಗೆ ಶಕ್ತಿಯೇ ಇಲ್ಲದ ಹಾಗೂ ಕಾರ್ಪೊರೇಟರ್ ಕೂಡ ಆಗಲು ಆಗದಂತಹ ವ್ಯಕ್ತಿಯನ್ನು ಕರೆತಂದು ಕೋಲಾರದಲ್ಲಿ ನಿಲ್ಲಿಸಿ ಪ್ರತ್ಯಕ್ಷವಾಗಿ, ಬೆಂಬಲ ನೀಡಿದವರು ಯಾರು? ರಮೇಶ್ ಕುಮಾರ್ ಯಾರ ಪರ ಕೆಲಸ ಮಾಡಿದರು. ಅಲ್ಲಿನ ಬಿಜೆಪಿ ಸಂಸದರ ಆಯ್ಕೆ ಹಿಂದೆ ಯಾರಿದ್ದಾರೆ? ಎಂದು ಕುಮಾರಸ್ವಾಮಿ ಅವರು ಡಿಕೆಶಿಗೆ ಪ್ರಶ್ನೆ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದ ದಲಿತ ನಾಯಕರ ಸೋಲಿಗೆ ಅವರೇ ಕಾರಣವಲ್ಲವೇ? ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರಿಗೆ ನಮ್ಮ ಪಕ್ಷದ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ ಎಂದು ಗುಡುಗಿದ್ದಾರೆ.