
ರಾಮನಗರ: ಈ ವರ್ಷದ ಬೇಸಿಗೆ ಇನ್ನೇನು ಆರಂಭವಾಗುತ್ತಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಆರಂಭವಾಗಿದೆ. ಅದರಲ್ಲೂ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಮಳೂರು ಹೋಬಳಿಯ ವಾಲೇತೋಪು ಜನರು ಬೇಸಿಗೆಗಾಲವಷ್ಟೇ ಅಲ್ಲ..ಕಳೆದ ಆರು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆಯಿಂದ ಕಂಗೆಟ್ಟಿದ್ದಾರೆ.

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಸಾಮಾನ್ಯವಾಗಿ ಎಲ್ಲೆಡೆ ಇರುತ್ತದೆ. ಆದರೆ ಮಳೂರು ಹೋಬಳಿಯ ವಾಲೇತೋಪು ಜನರು ಎಲ್ಲಾ ಕಾಲದಲ್ಲಿಯೂ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಇದೆ. ಈ ಬಗ್ಗೆ ಗ್ರಾಮಸ್ಥರು ಇದೀಗ ತಾಲೂಕು ಅಧಿಕಾರಿಗಳಿಗೆ ಪತ್ರ ಬರೆಯುವ ಮೂಲಕ ತಮ್ಮ ಕಷ್ಟವನ್ನು ಹೊರಹಾಕಿದ್ದಾರೆ.

ಕಳೆದ ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಬೇರೆಯವರ ಜಮೀನಿನ ಬೋರು ನೀರಿನ ವ್ಯವಸ್ಥೆಯಾಗಿದ್ದು, ಅದರಲ್ಲಿ ಮಣ್ಣು ಮಿಶ್ರಿತ ಅಶುದ್ಧ ನೀರು ಬರುತ್ತಿದೆ.

ಈ ಬಗ್ಗೆ ಮಳೂರು ಗ್ರಾಮ ಪಂಚಾಯಿತಿಗೆ ಎಷ್ಟೇ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಬೋರಿನ ಅಶುದ್ಧ ನೀರು ಕುಡಿದು ಗ್ರಾಮಸ್ಥರು ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಕೂಡಲೇ ವಾಲೇತೋಪು ಪ್ರದೇಶಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಸ್ಥಳೀಯರು ಅಧಿಕಾರಗಳಲ್ಲಿ ಮನವಿ ಮಾಡಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಹಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಶಾಶ್ವತ ಪರಿಹಾರಕ್ಕಾಗಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತುರ್ತು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಬ್ರಾಂಡ್ ಬೆಂಗಳೂರು ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಕುಡಿಯುವ ನೀರಿನಂತಹ ಮೂಲ ಸೌಲಭ್ಯಗಳನ್ನೇ ನಿರ್ಲಕ್ಷಿಸಿದರೆ ಹೇಗೆ ಎಂದು ಪ್ರಶ್ನಿಸಿರುವ ಸಾರ್ವಜನಿಕರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಪಿ. ಯೋಗೇಶ್ವರ್ ತಕ್ಷಣವೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.







