ವಿಶ್ವ ಆರೋಗ್ಯ ಸಂಸ್ಥೆ (World Health Organization) ಎಬೋಲಾ ವೈರಸ್ ಹರಡುವಿಕೆ ಹಿನ್ನೆಲೆ ಜಾಗತಿಕ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿರುವ ಬೆನ್ನಲ್ಲೇ, ಕರ್ನಾಟಕ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೊಳಿಸಿದೆ.ಪ್ರಸ್ತುತ ಭಾರತದಲ್ಲಿ ಯಾವುದೇ ಎಬೋಲಾ ಪ್ರಕರಣಗಳು ವರದಿಯಾಗಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ. ಆದರೆ ರೋಗದ ಬಗ್ಗೆ ಸರಿಯಾದ ಮಾಹಿತಿ ತಿಳಿದುಕೊಂಡು ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.

ಎಬೋಲಾ ಲಕ್ಷಣಗಳು ಏನು?
ಎಬೋಲಾ ಸೋಂಕು ತಗುಲಿದವರಲ್ಲಿ ತೀವ್ರ ಜ್ವರ, ತಲೆನೋವು, ಮೈಕೈ ನೋವು, ವಾಂತಿ, ಭೇದಿ ಹಾಗೂ ಚರ್ಮದ ಮೇಲೆ ದದ್ದುಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಸೋಂಕಿತ ವ್ಯಕ್ತಿಯ ರಕ್ತ, ದೇಹದ ದ್ರವಗಳು ಅಥವಾ ಸೋಂಕಿತ ವಸ್ತುಗಳ ನೇರ ಸಂಪರ್ಕದಿಂದ ಮಾತ್ರ ವೈರಸ್ ಹರಡುತ್ತದೆ. ಗಾಳಿಯ ಮೂಲಕ ಹರಡುವುದಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

ವಿಮಾನ ನಿಲ್ದಾಣಗಳಲ್ಲಿ ಕಠಿಣ ತಪಾಸಣೆ
ವೈರಸ್ ಹರಡುವಿಕೆ ತಡೆಗಟ್ಟಲು ಕೆಂಪೇಗೌಡ ವಿಮಾನ ನಿಲ್ದಾಣ (Kempegowda International Airport )ಹಾಗೂ ಮಂಗಳೂರು ವಿಮಾನ ನಿಲ್ದಾಣ (Mangalore International Airport)ಗಳಲ್ಲಿ ತಪಾಸಣೆ ಮತ್ತು ನಿಗಾವ್ಯವಸ್ಥೆ ಬಿಗಿಗೊಳಿಸಲಾಗಿದೆ.
ಶಂಕಿತ ಪ್ರಕರಣಗಳಿಗೆ ಪ್ರತ್ಯೇಕ ವಾರ್ಡ್ ಹಾಗೂ ಕ್ವಾರಂಟೈನ್ ಸೌಲಭ್ಯ ಸಿದ್ಧಪಡಿಸಲಾಗಿದೆ. ಬೆಂಗಳೂರಿನ Rajiv Gandhi Institute of Chest Diseases ಹಾಗೂ ಸಾಂಕ್ರಾಮಿಕ ರೋಗಗಳ ಆಸ್ಪತ್ರೆಯಲ್ಲಿ ವಿಶೇಷ ಚಿಕಿತ್ಸಾ ಸೌಲಭ್ಯ ಕಲ್ಪಿಸಲಾಗಿದೆ. ಮಂಗಳೂರಿನ Wenlock District Hospital ಮತ್ತು ಶ್ರೀನಿವಾಸ್ ಪೋರ್ಟ್ ಆಸ್ಪತ್ರೆಯಲ್ಲೂ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ.

21 ದಿನಗಳ ಕಡ್ಡಾಯ ಕ್ವಾರಂಟೈನ್
ಎಬೋಲಾ ಪೀಡಿತ ರಾಷ್ಟ್ರಗಳಿಂದ ರಾಜ್ಯಕ್ಕೆ ಆಗಮಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ 21 ದಿನಗಳ ಕಾಲ ಆರೋಗ್ಯ ಇಲಾಖೆಯ ನಿಗಾದಲ್ಲಿರಬೇಕು ಎಂದು ಸೂಚಿಸಲಾಗಿದೆ. ಈ ಅವಧಿಯಲ್ಲಿ ಯಾವುದೇ ಲಕ್ಷಣ ಕಂಡುಬಂದರೆ ತಕ್ಷಣವೇ ಆರೋಗ್ಯ ಕೇಂದ್ರ ಸಂಪರ್ಕಿಸುವಂತೆ ಸೂಚಿಸಲಾಗಿದೆ.ಸಾರ್ವಜನಿಕರು ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡಬೇಕು, ಅನಗತ್ಯವಾಗಿ ಆಸ್ಪತ್ರೆಗಳಿಗೆ ಭೇಟಿ ನೀಡುವುದನ್ನು ತಪ್ಪಿಸಬೇಕು ಹಾಗೂ ಆರೋಗ್ಯ ಇಲಾಖೆಯ ಅಧಿಕೃತ ಮಾರ್ಗಸೂಚಿಗಳನ್ನು ಮಾತ್ರ ಪಾಲಿಸಬೇಕು ಎಂದು ಮನವಿ ಮಾಡಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸುಳ್ಳು ಸುದ್ದಿಗಳಿಗೆ ಕಿವಿಗೊಡದೆ, ಅಧಿಕೃತ ಮಾಹಿತಿಯನ್ನೇ ನಂಬುವಂತೆ ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.





