ಬೆಂಗಳೂರು:
ನಗರದ ಪ್ರಸಿದ್ಧ ರಿಯಲ್ ಎಸ್ಟೇಟ್ ಸಂಸ್ಥೆಯಾದ ಮಂತ್ರಿ ಡೆವಲಪರ್ಸ್( Mantri Developers) ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ, ಇಡಿ ತಂಡ ಸಂಸ್ಥೆಯ ಕಚೇರಿ ಹಾಗೂ ಸಂಸ್ಥಾಪಕ ಸುನೀಲ ಮಂತ್ರಿ(Sunil Mantri) ಅವರ ನಿವಾಸಗಳ ಮೇಲೆ ಶೋಧ ಕಾರ್ಯ ನಡೆಸಿದೆ. ಬೆಂಗಳೂರಿನ ವಿಠ್ಠಲ ಮಲ್ಯ ರಸ್ತೆಯಲ್ಲಿರುವ ಕಚೇರಿಯಲ್ಲಿಯೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

1999ರಲ್ಲಿ ಸ್ಥಾಪಿತವಾದ ಮಂತ್ರಿ ಡೆವೆಲಪರ್ಸ್ ಸಂಸ್ಥೆ ಬೆಂಗಳೂರು ಕೇಂದ್ರ ಕಚೇರಿಯೊಂದಿಗೆ ಚೆನ್ನೈ, ಹೈದರಾಬಾದ್ ಮತ್ತು ಪುಣೆ ನಗರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ವಸತಿ, ವಾಣಿಜ್ಯ ಹಾಗೂ ರಿಟೇಲ್ ಕ್ಷೇತ್ರಗಳಲ್ಲಿ ಹಲವು ಯೋಜನೆಗಳನ್ನು ಕೈಗೊಂಡಿದೆ.
ದೆಹಲಿಯಿಂದ ಆಗಮಿಸಿದ ಸುಮಾರು 10ಕ್ಕೂ ಹೆಚ್ಚು ಅಧಿಕಾರಿಗಳು ಆರು ವಾಹನಗಳಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಸಂಬಂಧಿತ ಕಚೇರಿಗಳು ಹಾಗೂ ಇತರ ಸ್ಥಳಗಳಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಇಡಿ, ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಈಗಾಗಲೇ 2022ರಲ್ಲಿ ದಾಳಿ ನಡೆಸಿ, 2023ರಲ್ಲಿ ಸುಮಾರು 300 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿತ್ತು. ಗ್ರಾಹಕರಿಂದ ಅಪಾರ್ಟ್ಮೆಂಟ್ ಖರೀದಿಗೆ ಹಣ ಪಡೆದು ಅದನ್ನು ವಿದೇಶಗಳಲ್ಲಿ ಹೂಡಿಕೆ ಮಾಡಿರುವ ಆರೋಪವೂ ಕೇಳಿಬಂದಿತ್ತು.ಇದೇ ಪ್ರಕರಣದ ಮುಂದುವರಿದ ಭಾಗವಾಗಿ ಇದೀಗ ಮತ್ತೆ ದಾಳಿ ನಡೆಸಿರುವ ಅಧಿಕಾರಿಗಳು, ಹೆಚ್ಚಿನ ಮಾಹಿತಿಗಾಗಿ ದಾಖಲೆಗಳ ಸವಿಸ್ತಾರ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಇಲ್ಲಿದೆ ಹವಾಮಾನ ಇಲಾಖೆ ಮುನ್ಸೂಚನೆ






