ಬೆಂಗಳೂರು: ರಾಜ್ಯದಲ್ಲಿ ಮಾರಾಟವಾಗುತ್ತಿರುವ ಪಾನ್ ಮಸಾಲಾ ಹಾಗೂ ಗುಟ್ಕಾ ಉತ್ಪನ್ನಗಳ ವಿರುದ್ಧ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಇತ್ತೀಚೆಗೆ ಕೆಲವು ಉತ್ಪನ್ನಗಳಲ್ಲಿ ಮಾದಕ ದ್ರವ್ಯಗಳನ್ನು ಮಿಶ್ರಣ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ರಾಜ್ಯಾದ್ಯಂತ ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ.ಸರ್ಕಾರದ ಕಠಿಣ ಸೂಚನೆಯ ಬೆನ್ನಲ್ಲೇ ಅಧಿಕಾರಿಗಳ ತಂಡಗಳು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಗಳಲ್ಲಿ ಲಭ್ಯವಿರುವ ಪ್ರಮುಖ ಬ್ರ್ಯಾಂಡ್‌ಗಳ ಪಾನ್ ಮಸಾಲಾ ಮತ್ತು ಗುಟ್ಕಾ ಉತ್ಪನ್ನಗಳ ಮಾದರಿಗಳನ್ನು ಸಂಗ್ರಹಿಸುತ್ತಿವೆ.

ಈ ವಿಶೇಷ ಸ್ಯಾಂಪಲ್ ಸಂಗ್ರಹ ಅಭಿಯಾನ ಸತತ ಎರಡು ದಿನಗಳ ಕಾಲ ನಡೆಯಲಿದ್ದು, ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ವಿವಿಧ ಕಂಪನಿಗಳ ಉತ್ಪನ್ನಗಳನ್ನು ಪರಿಶೀಲನೆಗೆ ಒಳಪಡಿಸಲಾಗುತ್ತಿದೆ.ಸಂಗ್ರಹಿಸಿದ ಎಲ್ಲಾ ಮಾದರಿಗಳನ್ನು ತಕ್ಷಣವೇ ಪ್ರಯೋಗಾಲಯಕ್ಕೆ ರವಾನಿಸಲಾಗುತ್ತಿದ್ದು, ವರದಿಗಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ. ಪರೀಕ್ಷೆಯಲ್ಲಿ ಡ್ರಗ್ಸ್ ಅಥವಾ ಆರೋಗ್ಯಕ್ಕೆ ಹಾನಿಕಾರಕ ರಾಸಾಯನಿಕಗಳು ಪತ್ತೆಯಾದರೆ ಸಂಬಂಧಿತ ಉತ್ಪನ್ನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರ ಜೊತೆಗೆ ರಾಜ್ಯದಲ್ಲಿ ಪಾನ್ ಮಸಾಲಾ ಹಾಗೂ ಗುಟ್ಕಾ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವ ಸಾಧ್ಯತೆಯಿದೆ ಎಂದು ಸರ್ಕಾರ ಈಗಾಗಲೇ ಸ್ಪಷ್ಟ ಎಚ್ಚರಿಕೆ ನೀಡಿದೆ.

ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿರುವ ಸರ್ಕಾರದ ಈ ಕ್ರಮವು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಂತ್ರಣದ ದೃಷ್ಟಿಯಿಂದ ಮಹತ್ವದ ಬೆಳವಣಿಗೆಯಾಗಿದೆ. ಲ್ಯಾಬ್ ವರದಿ ಬಂದ ಬಳಿಕ ಸರ್ಕಾರದ ಮುಂದಿನ ನಿರ್ಧಾರ ಏನಾಗಲಿದೆ ಎಂಬುದರತ್ತ ಸಾರ್ವಜನಿಕರು ಹಾಗೂ ಪಾನ್ ಮಸಾಲಾ-ಗುಟ್ಕಾ ಉತ್ಪಾದಕ ಕಂಪನಿಗಳ ಚಿತ್ತ ನೆಟ್ಟಿದೆ.






