ಕಾಂಗ್ರೆಸ್ ಪಕ್ಷಕ್ಕೆ ಗುರುನೂ ಇಲ್ಲ, ಗುರಿಯೂ ಇಲ್ಲ. ಪ್ರಾದೇಶಿಕ ಪಕ್ಷಗಳನ್ನು ಕೊಲ್ಲಲು ಸಾಕಷ್ಟು ಪ್ರಯತ್ನ ಮಾಡಿದ ಕಾಂಗ್ರೆಸ್ ಇಂದು ಹೀನಾಯ ಸೋಲು ಅನುಭವಿಸಿದೆ
ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿರುವ ಕಾಂಗ್ರೆಸ್ ಪಕ್ಷವನ್ನು ಲೇವಡಿ ಮಾಡಿದ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಕಾಂಗ್ರೆಸ್ ಡೈವರ್ ಇಲ್ಲದ ಬಸ್ ಎಂದು ವ್ಯಂಗ್ಯವಾಡಿದ್ದಾರೆ.
ಕಲಬುರಗಿಯ ಐವನ್ ಇ ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ, ಕಾಂಗ್ರೆಸ್ ಪಕ್ಷಕ್ಕೆ ಗುರುನೂ ಇಲ್ಲ, ಗುರಿಯೂ ಇಲ್ಲ. ಪ್ರಾದೇಶಿಕ ಪಕ್ಷಗಳನ್ನು ಕೊಲ್ಲಲು ಸಾಕಷ್ಟು ಪ್ರಯತ್ನ ಮಾಡಿದ ಕಾಂಗ್ರೆಸ್ ಇಂದು ಹೀನಾಯ ಸೋಲು ಅನುಭವಿಸಿದೆ ಎಂದು ಟೀಕಿಸಿದ್ದಾರೆ.
2024ರ ಲೋಕಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರಲಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನೆಲಕಚ್ಚಿಕೊಳ್ಳಲಿದೆ. ಅದೇ ರೀತಿ ಮುಂಬರುವ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ 100ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಸ್ವಂತ ಬಲದ ಮೇಲೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ, ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.