ಬೆಂಗಳೂರು: ಕಂಪ್ಯೂಟರ್ ಆವಿಷ್ಕಾರ ಮಾಡಿದ ವಿಜ್ಞಾನಿ ಚಾರ್ಲ್ಸ್ ಬ್ಯಾಬೇಜ್ ಅವರ ಹುಟ್ಟಿದ ದಿನವಾದ ಡಿಸೆಂಬರ್.26ರಂದು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿನ ಡಾಟಾ ಎಂಟ್ರಿ ಆಪರೇಟರುಗಳು ಇನ್ನು ಮುಂದೆ ಪ್ರತಿ ವರ್ಷ ಕಂಪ್ಯೂಟರ್ ಆಪರೇಟರುಗಳ ದಿನವನ್ನಾಗಿ ಆಚರಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಸಂಬಂಧ ಸಮ್ಮತಿ ಸೂಚಿಸಿದ್ದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಗುಮಾಸ್ತರು ಹಾಗೂ ಡಾಟಾ ಎಂಟ್ರಿ ಆಪರೇಟರ್ ಉದ್ಯೋಗಿಗಳ ಕಲ್ಯಾಣ ಸಂಘದ ಅಧ್ಯಕ್ಷ ಭೀಮರೆಡ್ಡಿ ಪಾಟಿಲ್ ಅವರು ಸಚಿವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಗ್ರಾಮೀಣ ಜನರ ಅನಕೂಲಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ಕಾರ್ಯಕ್ರಮಗಳು ಹಾಗೂ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಸಿಗುವ ಸೌಲಭ್ಯಗಳನ್ನು ಸಾರ್ವಜನಿಕರ ಸನಿಹಕ್ಕೆ ತೆಗೆದುಕೊಂಡು ಹೋಗುತ್ತಿರುವ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಗುರುತಿಸಿ ಅವರ ಕಲ್ಯಾಣಕ್ಕಾಗಿ ದಿನಾಚರಣೆ ಘೋಷಣೆ ಮಾಡಿರುವುದು ಸಂತಸ ತಂದಿದೆ ಎಂದು ಸಂಘದ ಅಧ್ಯಕ್ಷರು ಸಚಿವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.