2024 ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆಯುವ ಮೂಲಕ ಲೋಕಸಭಾ ಚುನಾವಣೆ ಗೆಲ್ಲಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಿದ್ಧತೆ ನಡೆಸಿದ್ದಾರೆ. ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರಾಗಿರುವ ಬಿ.ಎಸ್.ಯಡಿಯೂರಪ್ಪ ಬುಧವರಾದ ಸಂಜೆ 4 ಗಂಟೆಗೆ ರಸ್ತೆ ಮೂಲಕ ಮೈಸೂರಿಗೆ ಪ್ರಯಾಣ ಬೆಳಸಲಿದ್ದಾರೆ.

ಸಂಜೆ 6:30 ಕ್ಕೆ ಚಾಮುಂಡಿ ಬೆಟ್ಟಕ್ಕೆ ಹೋಗಲಿರುವ ಬಿ.ಎಸ್. ಯಡಿಯೂರಪ್ಪ, ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ಲೋಕ ಸಮರ ಗೆಲ್ಲಲು ಪ್ರಾರ್ಥನೆ ಮಾಡಲಿದ್ದಾರೆ. ಇಂದು ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಲಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ನಾಳೆ ಬೆಳಗ್ಗೆ 10 ಗಂಟೆಗೆ ಮೈಸೂರಿನ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಮಧ್ಯಾಹ್ನ 1:30 ಕ್ಕೆ ಹೆಲಿಕಾಪ್ಟರ್ ಮೂಲಕ ಮೈಸೂರಿನಿಂದ ದಾವಣಗೆರೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಯಡಿಯೂರಪ್ಪ ಆಪ್ತ ಮೂಲಗಳು ಮಾಹಿತಿ ನೀಡಿವೆ.

ನಾಳೆ ದಾವಣಗೆರೆ ಜಿಲ್ಲೆಯ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣದಲ್ಲಿ ಭಾಗಿಯಾಗಲಿರುವ ಯಡಿಯೂರಪ್ಪ, ನಾಳೆ ದಾವಣಗೆರೆಯಲ್ಲಿಯೇ ವಾಸ್ತವ್ಯ ಹೂಡಲಿದ್ದು, ಶುಕ್ರವಾರ ಬೆಳಗ್ಗೆ ದಾವಣಗೆರೆಯಿಂದ ಬೀದರ್‌ಗೆ ಪ್ರಯಾಣ ಬೆಳೆಸಲಿದ್ದಾರೆ. ಹೆಲಿಕಾಪ್ಟರ್ ಮೂಲಕ ಬೀದರ್‌ಗೆ ತೆರಳಲಿದ್ದು, ಬೀದರ್‌ನ ಲೋಕಸಭಾ ಕ್ಷೇತ್ರದ ಪಕ್ಷದ ಪ್ರಮುಖ ನಾಯಕರ ಜೊತೆಗೆ ಸಭೆ ನಡೆಸಲಿದ್ದಾರೆ. 2024ರ ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿದ್ದು, ತಾಯಿ ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿ ರಂಗ ಪ್ರವೇಶಿಸಲಿದ್ದಾರೆ.


