ಮೈಸೂರು: ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಿ, ಶೀಘ್ರವೇ ಬಗೆಹರಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಪಿರಿಯಾಪಟ್ಟಣ ತಾಲ್ಲೂಕಿನ ಮಾಕೋಡು ಗ್ರಾಮಪಂಚಾಯಿತಿಯಲ್ಲಿ ಆಯೋಜಿಸಿದ್ದ ʼಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಂದಾಯ ಇಲಾಖೆಯ 93, ಪಂಚಾಯಿತಿಯ 99, ಚೆಸ್ಕಾಂನ 8, ಸರ್ವೇಗೆ ಸಂಬಂಧಿಸಿದ 5, ಆರೋಗ್ಯ ಇಲಾಖೆಯ 2, ಸಮಾಜ ಕಲ್ಯಾಣ ಇಲಾಖೆಯ 1 ಹಾಗೂ ಸಾರಿಗೆ ಇಲಾಖೆ ಸಂಬಂಧಿಸಿದ 1 ಸೇರಿದಂತೆ ಒಟ್ಟು 209 ಅರ್ಜಿಗಳು ಸಲ್ಲಿಕೆಯಾಗಿದೆ ಎಂದು ತಿಳಿಸಿದರು.
ಗ್ರಾಮವಾಸ್ತವ್ಯ ಹೊಸದೇನಲ್ಲ ಗ್ರಾಮಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸುವ ಕಾರ್ಯವನ್ನು ಬಹಳ ಹಿಂದಿನಿಂದಲೂ ನಡೆಸಿಕೊಂಡು ಬರುತ್ತಿದ್ದೇನೆ. ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಈ ರೀತಿಯ ಕಾರ್ಯಕ್ರಮದಿಂದ ಅಧಿಕಾರಿಗಳು ಮತ್ತು ಸಾರ್ವಜನಿಕರ ನಡುವಿನ ಅಂತರವನ್ನು ಕಡಿಮೆ ಮಾಡಲು ಉಪಯುಕ್ತವಾಗಿವೆ. ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಸಮಸ್ಯೆಗಳನ್ನು ಪ್ರತ್ಯಕ್ಷವಾಗಿ ನೋಡಲು ಸಾಧ್ಯವಾಗಿದೆ. ಹೀಗಾಗಿ ಸ್ವೀಕರಿಸಿರುವ ಅರ್ಜಿಗಳನ್ನು 15 ದಿನದಲ್ಲಿ ಬಗೆಹರಿಸಿಕೊಡಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಮಾಕೋಡು ಗ್ರಾಮಸ್ಥರು ಬಸವೇಶ್ವರ ದೇವಸ್ಥಾನ ನಿರ್ವಹಣೆ, ಚನ್ನಕೇಶ್ವರ ದೇವಸ್ಥಾನ ಅಭಿವೃದ್ಧಿ ಬಗ್ಗೆ ಮನವಿ ಮಾಡಿದರು. ಉಳಿದಂತೆ ಜೈನ ಬಸದಿ ಕೌಂಪೌಂಡ್, ಶಾಲಾ ಒತ್ತುವರಿ ತೆರವು, 83 ಎಕರೆ ಗೋಮಾಳ ತೆರವು, ಗ್ರಂಥಾಲಯ ನಿರ್ಮಾಣ, ಮೆಟ್ಲಿಂಗ್ ರಸ್ತೆ ನಿರ್ಮಾಣ, ಚರಂಡಿ ನಿರ್ಮಾಣ, ಮುಸ್ಲಿಂ ಸ್ಮಶಾನ ಅಭಿವೃದ್ಧಿ ಸೇರಿದಂತೆ ಗ್ರಾಮದ ಅಭಿವೃದ್ಧಿ ಕಾರ್ಯಗಳು ಹಾಗೂ ವೈಯಕ್ತಿಕ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಬಳಿ ಅರ್ಜಿ ಸಲ್ಲಿಸಿ ಪರಿಹಾರ ದೊರಕಿಸಿಕೊಡುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಶಾಸಕ ಕೆ.ಮಹಾದೇವ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರೇಮ್ ಕುಮಾರ್, ತಹಸೀಲ್ದಾರ್ ಕೆ.ಚಂದ್ರಮೌಳಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸಿ.ಆರ್.ಕೃಷ್ಣಕುಮಾರ್ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.