ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲಾಗುತ್ತಿದೆ. ವಿಶೇಷವಾಗಿ ಖಾಸಗಿ ಕಾಲೇಜುಗಳಲ್ಲಿರುವ ಪರೀಕ್ಷಾ ಕೇಂದ್ರಗಳಲ್ಲಿ ಇಬ್ಬರು ವೀಕ್ಷಕರನ್ನು ನಿಯೋಜಿಸಿ ಹೆಚ್ಚುವರಿ ನಿಗಾ ವಹಿಸಲಾಗಿದೆ. ಪರೀಕ್ಷಾ ಸಿಬ್ಬಂದಿಗೆ ಜಿಲ್ಲಾಡಳಿತ ಈಗಾಗಲೇ ಎರಡು ಹಂತಗಳಲ್ಲಿ ತರಬೇತಿ ನೀಡಿದೆ.

ಈ ಬಾರಿಯ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಗೆ ಕೆಲವು ಧಾರ್ಮಿಕ ಗುರುತುಗಳನ್ನು ಧರಿಸಲು ವಿನಾಯಿತಿ ನೀಡಲಾಗಿದೆ. ಪುರುಷ ಅಭ್ಯರ್ಥಿಗಳು ಜನಿವಾರ ಹಾಗೂ ಉಡುದಾರ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಮಹಿಳಾ ಅಭ್ಯರ್ಥಿಗಳು ಮಂಗಳಸೂತ್ರ, ಬಳೆ ಮತ್ತು ಮೂಗುತಿ ಧರಿಸಬಹುದು. ಆದರೆ ಮೊಬೈಲ್ ಫೋನ್, ಬ್ಲೂಟೂತ್, ಸ್ಮಾರ್ಟ್ ವಾಚ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲೇ ಅಭ್ಯರ್ಥಿಗಳನ್ನು ತಪಾಸಣೆ ನಡೆಸಿದ ಬಳಿಕ ಒಳಗೆ ಬಿಡಲಾಗುತ್ತದೆ. ಬೆಳಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಮೊದಲ ಅವಧಿಯ ಪರೀಕ್ಷೆ ನಡೆಯಲಿದ್ದು, ಮಧ್ಯಾಹ್ನ 2ರಿಂದ ಸಂಜೆ 4ರವರೆಗೆ ಎರಡನೇ ಅವಧಿಯ ಪರೀಕ್ಷೆ ನಡೆಯಲಿದೆ.

ಪರೀಕ್ಷೆಯ ಹಿನ್ನೆಲೆಯಲ್ಲಿ ಬೆಳಗಾವಿ ನಗರದ ವಿಶ್ವೇಶ್ವರಯ್ಯ ನಗರದಲ್ಲಿರುವ ಜಿಲ್ಲಾ ಖಜಾನೆಯಲ್ಲಿ ಇರಿಸಲಾಗಿದ್ದ ಪ್ರಶ್ನೆಪತ್ರಿಕೆಗಳ ಬಂಡಲ್ಗಳನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ಸಮ್ಮುಖದಲ್ಲಿ ಭಾನುವಾರ ಬೆಳಗ್ಗೆ ತೆರೆಯಲಾಯಿತು. ಬಳಿಕ ಪೊಲೀಸ್ ಭದ್ರತೆ ಹಾಗೂ ಎಸ್ಕಾರ್ಟ್ ವ್ಯವಸ್ಥೆಯೊಂದಿಗೆ ಪ್ರಶ್ನೆಪತ್ರಿಕೆಗಳನ್ನು ವಿವಿಧ ಪರೀಕ್ಷಾ ಕೇಂದ್ರಗಳಿಗೆ ರವಾನಿಸಲಾಯಿತು.
ಪರೀಕ್ಷೆಯ ಕೊನೆಯ ಹಂತದ ಸಿದ್ಧತೆಗಳನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಪದವಿ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದರು. ಕೇಂದ್ರದಲ್ಲಿನ ವ್ಯವಸ್ಥೆ, ಭದ್ರತೆ ಹಾಗೂ ಅಭ್ಯರ್ಥಿಗಳಿಗೆ ಕಲ್ಪಿಸಿರುವ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.
12,244 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಪರೀಕ್ಷಾ ಅಕ್ರಮ ತಡೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಪೊಲೀಸ್ ಭದ್ರತೆ ಮತ್ತು ತಪಾಸಣೆಯೊಂದಿಗೆ ಪರೀಕ್ಷೆ ನಡೆಸಲು ಸಿದ್ಧತೆ ಪೂರ್ಣಗೊಳಿಸಿದೆ.





