ಬೆಳಗಾವಿ: ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ(40) ಅನಾರೋಗ್ಯದಿಂದಾಗಿ ಸಾವನ್ನಪ್ಪಿದ್ದಾರೆ.
ಜಯಶ್ರೀ ಗುರನ್ನವರ ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಜಯಶ್ರೀ ಗುರನ್ನವರ ಉತ್ತರ ಕರ್ನಾಟಕ ಭಾಗದಲ್ಲಿ ರೈತ ಹೋರಾಟದಲ್ಲಿ ಮುಂಚೂಣಿಯಾಗಿ ಭಾಗವಹಿಸುತ್ತಿದ್ದರು. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅವರ ಬಗ್ಗೆ ಹಗುರವಾಗಿ ಮಾತನಾಡಿ, ಹಲವಾರು ಟೀಕೆಗಳಿಗೆ ಗುರಿಯಾಗಿದ್ದರು. ಇವರು ಉತ್ತರ ಕರ್ನಾಟಕ ಭಾಗದಲ್ಲಿ ಮಹಿಳಾ ರೈತ ಹೋರಾಟಗಾರರ ಸಂಘಟನೆ ಮಾಡಿದ್ದರು. ಕಬ್ಬಿನ ಬಾಕಿ ಬಿಲ್ ಗಾಗಿ ಸುವರ್ಣ ಸೌಧಕ್ಕೆ ಕಬ್ಬು ತುಂಬಿದ ಲಾರಿ ತೆಗೆದುಕೊಂಡು ಹೋಗಿ, ಸರ್ಕಾರದ ಗಮನ ಸೆಳೆದಿದ್ದರು. ಸದ್ಯ ಜಯಶ್ರೀ ಅವರು ಓರ್ವ ಮಗನನ್ನು ಅಗಲಿದ್ದಾರೆ.