ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಭಯೋತ್ಪಾದಕರು (Terrorist attack) ದಾಳಿ ನಡೆಸಿದ್ದು, 10 ಜನರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ (Jammu & Kashmir) ರಿಯಾಸಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.ರಿಯಾಸಿ ಜಿಲ್ಲೆಯ ಶಿವ ಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳು ಬಸ್ ನಲ್ಲಿ ಸಂಚರಿಸುತ್ತಿದ್ರು.ಈ ವೇಳೆ ಬಸ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ರು.
ಈ ದಾಳಿಯಿಂದಾಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಆಳವಾದ ಕಂದಕಕ್ಕೆ ಬಿದ್ದಿದೆ. ಪರಿಣಾಮ ಬಸ್ಸಿನಲ್ಲಿದ್ದ ಯಾತ್ರಾರ್ಥಿಗಳ ಪೈಕಿ 10 ಜನರು ಮೃತಪಟ್ಟಿದ್ದು, 33 ಮಂದಿ ಗಾಯಗೊಂಡಿದ್ದಾರೆ. ಇನ್ನು ಈ ಬಗ್ಗೆ ಮಾಹಿತಿ ಪಡೆದ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಇತರ ಪಡೆಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿ ಹಲವಾರು ಖಾಲಿ ಗುಂಡುಗಳು ಕೂಡ ಪತ್ತೆಯಾಗಿವೆ.
ಇನ್ನು ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಯಾತ್ರಾರ್ಥಿಗಳ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರೋರನ್ನ ಬಿಡಲಾಗುವುದಿಲ್ಲ, ಅವರು ಕಾನೂನಿನ ಕೋಪ ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಸಚಿವ ಅಮಿತ್ ಶಾ (Amit sha) ಹೇಳಿದ್ರು. ನೆನ್ನೆ ಅಮಿತ್ ಶಾ 2ನೇ ಬಾರಿಗೆ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ (Manoj sinha) ಮತ್ತು ಡಿಜಿಪಿ ಆರ್.ಆರ್.ಸ್ಟೈನ್ ಅವರೊಂದಿಗೆ ಮಾತನಾಡಿದ್ದು, ಘಟನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಪಡೆದುಕೊಂಡ್ರು.